Udayavani | Aug 11, 2012
ಮುಂಬಯಿ : ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ ಇದರ 13 ನೇ ವಾರ್ಷಿಕೋತ್ಸವ ಸಮಾರಂಭವು ಆ. 12 ರಂದು ಕುರ್ಲಾ ಪೂರ್ವದ ಬಂಟರ ಭವನದ ಸಭಾಗೃಹದಲ್ಲಿ ನಡೆಯಲಿದೆ.
ಶ್ರೀಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಸಾಧ್ವಿ ಶ್ರೀ ಮಾತಾನಂದಮಯಿ ಅವರ ಉಪಸ್ಥಿತಿಯಲ್ಲಿ ಸಾರ್ವಜನಿಕ ಗುರುವಂದನೆ, ಶ್ರೀಗಳ ಪಾದಪೂಜೆ ಮತ್ತು ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ನೆರವೇರಲಿದೆ. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಅಪರಾಹ್ನ 2.30 ರಿಂದ ಅಭಿನಯ ಮಂಟಪದ ಕಲಾವಿದರಿಂದ ಕೋಟಿ-ಚೆನ್ನಯ ತುಳು ಪೌರಾಣಿಕ ನಾಟಕ ಪ್ರದರ್ಶನಗೊಳ್ಳಲಿದೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ತುಂಗಾ ಗ್ರೂಪ್ ಆಫ್ ಹೊಟೇಲ್ಸ್‌ನ ಮುಖ್ಯ ಆಡಳಿತ ನಿರ್ದೇಶಕ ಸುಧಾಕರ ಎಸ್. ಹೆಗ್ಡೆ, ಬಂಟರ ಸಂಘ ಮುಂಬಯಿ ಅಧ್ಯಕ್ಷ ಸಿಎ ಶಂಕರ್ ಬಿ. ಶೆಟ್ಟಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಎಲ್. ವಿ. ಅಮೀನ್, ದೇವಾಡಿಗ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಧರ್ಮಪಾಲ್ ದೇವಾಡಿಗ, ಸಾಫಲ್ಯ ಸೇವಾ ಸಂಘ ಮುಂಬಯಿ ಮಾಜಿ ಅಧ್ಯಕ್ಷ ಎಂ. ಜಿ. ಕರ್ಕೇರ, ಬಂಟರ ಸಂಘ ಮುಂಬಯಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಲತಾ ಪ್ರಭಾಕರ ಶೆಟ್ಟಿ ಅವರು ಆಗಮಿಸಲಿದ್ದಾರೆ.
ಸಮಾರಂಭದಲ್ಲಿ ಗುರುದೇವ ಸೇವಾ ಬಳಗದ ಸಕ್ರಿಯ ಸದಸ್ಯ ಆನಂದ ಎ. ಶೆಟ್ಟಿ ಭಾಯಂದರ್ ಅವರನ್ನು ಅತಿಥಿ-ಗಣ್ಯರು ಸಮ್ಮಾನಿಸಲಿದ್ದಾರೆ. ಇದೇ ಸಂದರ್ಭದಲ್ಲಿ 2011-2012 ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಸಿ ಮತ್ತು ಎಚ್‌ಎಸ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರವನ್ನಿತ್ತು ಗೌರವಿಸಲಾಗುವುದು.
ರಾತ್ರಿ 8.30 ರಿಂದ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನೆರವೇರಲಿದೆ ಎಂದು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷರು, ಪದಾಧಿಕಾರಿಗಳು ಸದಸ್ಯರು, ಶ್ರೀ ವಜ್ರಮಾತಾ ಮಹಿಳಾ ವಿಕಾಸ ಕೇಂದ್ರ ಮಹಾರಾಷ್ಟ್ರ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯೆಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.