ನವದೆಹಲಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅರೆವೈದ್ಯಕೀಯ ವಿದ್ಯಾರ್ಥಿನಿ ಮೇಲೆ ದುಷ್ಕರ್ಮಿಗಳ ಗುಂಪೊಂದು ಸಾಮೂಹಿಕ ಅತ್ಯಾಚಾರ ನಡೆಸಿರುವುದನ್ನು ಖಂಡಿಸಿ ದೆಹಲಿಯ ವಿವಿಧೆಡೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಮುಂದುವರಿದಿದ್ದು ಉಗ್ರರೂಪ ತಾಳಿದೆ. ಪ್ರತಿಭಟನಾಕಾರರು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಸುಮಾರು 90 ನಿಮಿಷಗಳ ಕಾಲ ಮಾತುಕತೆ ನಡೆದಿದ್ದು ಸೋನಿಯಾ ಹಾಗೂ ರಾಹುಲ್ ಶೀಘ್ರವೇ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂಬ ಭರವಸೆಯನ್ನು ಪ್ರತಿಭಟನಾಕಾರರಿಗೆ ತಿಳಿಸಿದ್ದಾರೆ. ಕಾನೂನು ತಿದ್ದುಪಡಿ ಕುರಿತು ಕೂಡಾ ಭರವಸೆಯನ್ನು ನೀಡಿದ್ದಾರೆ. ಆದರೆ ಎಷ್ಟು ಸಮಯದೊಳಗೆ ಕ್ರಮ ಕೈಗೊಳ್ಳಲಾಗುವುದು ಎಂಬುದನ್ನು ತಿಳಿಸಲು ನಿರಾಕರಿಸಿದ್ದಾರೆ. ಇದೇ ವೇಳೆ ಸೋನಿಯಾ, ರಾಹುಲ್ ಶಾಂತಿ ಕಾಪಾಡಲು ಪ್ರತಿಭಟನಾಕಾರರಿಗೆ ಮನವಿ ಮಾಡಿದ್ದಾರೆ.
ಆದರೂ ದೆಹಲಿಯ ವಿವಿಧೆಡೆ ತೀವ್ರತರವಾದ ಪ್ರತಿಭಟನೆ ಮುಂದುವರಿದಿದ್ದು ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳು, ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ. ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೋಲಿಸರು ಜಲಫಿರಂಗಿ ,ಅಶ್ರುವಾಯು ಪ್ರಯೋಗ ಹಾಗೂ ಲಾಠಿಚಾರ್ಜ್ ಅನ್ನು ಪ್ರಯೋಗಿಸಿದ್ದಾರೆ.