ಬೆಂಗಳೂರು : ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಒಂದೆರಡು ದಿನಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ಕೆಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆಸಿದ ಪಕ್ಷದ ಪದಾಧಿಕಾರಿಗಳ ಸಭೆ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆ ಚುನಾವಣೆಗೆ ಕೆಜೆಪಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಫೆ.20ರ ಬಳಿಕ ನಾಮಪತ್ರ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಸೂಚನೆ ನೀಡುವ ಬಗ್ಗೆ ಚರ್ಚೆ ನಡೆದಿದ್ದು, ಈ ಚುನಾವಣೆಯಲ್ಲಿ ಪಕ್ಷ ನಿರೀಕ್ಷೆಗೂ ಮೀರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸವ್ಯಕ್ತಪಡಿಸಿದರು.ತೆಂಗಿನಕಾಯಿ ಚಿಹ್ನೆಪಕ್ಷಕ್ಕೆ ಈವರೆಗೆ ಅಧಿಕೃತ ಚಿಹ್ನೆ ದೊರೆಯದಿರುವ ಹಿನ್ನೆಲೆಯಲ್ಲಿ ತೆಂಗಿನಕಾಯಿ ಚಿಹ್ನೆ ನೀಡುವಂತೆ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು.ಮಾಜಿ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಶಾಸಕ ಎಚ್. ಹಾಲಪ್ಪ, ಪಕ್ಷದ ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ, ವಿ. ಧನಂಜಯಕುಮಾರ್ ಸೇರಿದಂತೆ ರಾಜ್ಯ ಪದಾಧಿಕಾರಿಗಳು, ಟಿಕೆಟ್ ಆಕಾಂಕ್ಷಿಗಳು ಸಭೆಯಲ್ಲಿ ಭಾಗವಹಿಸಿದ್ದರು.