ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ: ರಮೇಶ್ ಜಾರಕಿಹೊಳಿ
Team Udayavani, Mar 7, 2020, 3:02 PM IST
ಬೆಳಗಾವಿ: ಸರಕಾರದ ವಿರುದ್ಧ ಟೀಕೆ ಮಾಡುತ್ತಿರುವವರ ಕಣ್ಣಿಗೆ ಕಾಮಾಲೆಯಾಗಿದೆ. ಮುಂದೆ ಒಳ್ಳೆಯ ದಿನಗಳು ಬಂದಾಗ ಗೊತ್ತಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿಗಳು ಒಳ್ಳೆಯ ಬಜೆಟ್ ನೀಡಿದ್ದಾರೆ ಎಂದರು. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ದರಿದ್ರ ಸರ್ಕಾರ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು ಯಾರು ದರಿದ್ರರು ಎಂಬುದನ್ನು ಜನ ತೀರ್ಮಾನ ಮಾಡ್ತಾರೆ ಎಂದರು.
ರಾಜ್ಯದ ಅಭಿವೃದ್ಧಿಗೆ ಸಿಎಂ ಉತ್ತಮ ಬಜೆಟ್ ಕೊಟ್ಟಿದ್ದಾರೆ. ವಿಶೇಷವಾಗಿ ನೀರಾವರಿಗೆ ಹೆಚ್ಚಿನ ಒತ್ತು ಕೊಟ್ಟಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಸೇರಿ ಎಲ್ಲಾ ಇಲಾಖೆಗಳಿಗೆ ಸಮನಾಗಿ ಅನುದಾನ ಹಂಚಿದ್ದಾರೆ ಎಂದರು. ಕ್ಯಾಬಿನೆಟ್ನಲ್ಲಿ ಚರ್ಚಿಸಿದಂತೆ ಕೃಷ್ಣಾ ಮೇಲ್ದಂಡೆ ಯೋಜನೆಗೆ 10 ಸಾವಿರ ಕೋಟಿ ಕೊಟ್ಟಿದ್ದಾರೆ. ಅದಕ್ಕೆ ಯಡಿಯೂರಪ್ಪರವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.