ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ
Team Udayavani, Aug 5, 2017, 6:45 AM IST
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಕೊಂಚ ಚುರುಕುಗೊಂಡಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ, ಮಲೆನಾಡಿನ ಹಾಸನ ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕರ್ನಾಟಕದ ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕಚೇರಿ ಪ್ರಕಟಣೆ ತಿಳಿಸಿದೆ.
ಕಳೆದ ಒಂದು ವಾರದಿಂದ ರಾಜ್ಯದ ಬಹುತೇಕ ಎಲ್ಲ ಭಾಗಗಳಲ್ಲಿ ಮಳೆ ವಿರಾಮ ನೀಡಿತ್ತು. ಪರಿಣಾಮ ಜಲಾಶಯಗಳಿಗೆ ಬರುವ ನೀರಿನ ಮಟ್ಟ ಕೂಡ ಸಾಕಷ್ಟು ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಶುಕ್ರವಾರದಿಂದ ಮುಂಗಾರು ಮಾರುತಗಳು ಚುರುಕುಗೊಂಡಿದ್ದರಿಂದ ಮತ್ತೆ ಮಳೆ ನಿರೀಕ್ಷಿಸಲಾಗಿದೆ.