ಪರಿಶಿಷ್ಟ ಜಾತಿ-ವರ್ಗಕ್ಕೆ ಸರ್ಕಾರಿ ಸೌಲಭ್ಯ ತಲುಪಲಿ

•ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆಯಾಗದಂತೆಯೂ ಜಾಗ್ರತೆ ವಹಿಸಿ: ವಿನೋತ್‌ ಪ್ರಿಯಾ

Team Udayavani, Jun 27, 2019, 12:05 PM IST

ಚಿತ್ರದುರ್ಗ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ತೈಮಾಸಿಕ ಸಭೆ ನಡೆಯಿತು.

ಚಿತ್ರದುರ್ಗ: ಪರಿಶಿಷ್ಟ ಜಾತಿ ಮತ್ತು ವರ್ಗದವರ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನ ಬಗ್ಗೆ ಜಾಗೃತಿ ಮೂಡಿಸಬೇಕು. ಅಲ್ಲದೆ ಪರಿಶಿಷ್ಟರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಲು ಮುಖಂಡರು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ವಿನೋತ್‌ ಪ್ರಿಯಾ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ತ್ತೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ವರ್ಗದವರ ಮೇಲೆ ನಡೆಯುವ ಕೊಲೆ, ಅತ್ಯಾಚಾರ ಸೇರಿದಂತೆ ವಿವಿಧ ದೌರ್ಜನ್ಯ ಪ್ರಕರಣಗಳಲ್ಲಿ ಸರ್ಕಾರದ ನಿಯಮಗಳಂತೆ ಪರಿಹಾರ ಧನವನ್ನು ಅನಗತ್ಯವಾಗಿ ವಿಳಂಬ ಮಾಡದೆ ತ್ವರಿತವಾಗಿ ದೊರಕಿಸಿಕೊಡಬೇಕು. ಅದೇ ರೀತಿ ದೌರ್ಜನ್ಯ ತಡೆ ಕಾಯ್ದೆ ದುರ್ಬಳಕೆಯಾಗದಂತೆಯೂ ಜಾಗೃತಿ ಮೂಡಿಸಬೇಕು ಎಂದರು.

ಕಾನೂನನ್ನು ಸರಿಯಾಗಿ ತಿಳಿದುಕೊಂಡಾಗ ಮಾತ್ರ, ಗೌರವದಿಂದ ಬದುಕಲು ಸಾಧ್ಯ. ಪರಿಶಿಷ್ಟರ ರಕ್ಷಣೆಗಾಗಿ ಸರ್ಕಾರ ರೂಪಿಸಿರುವ ಕಾಯ್ದೆಯ ಬಗ್ಗೆ ಪ್ರತಿಯೊಂದು ಗ್ರಾಮಗಳಲ್ಲೂ ಅರಿವು ಮೂಡಿಸುವ ಅಗತ್ಯವಿದೆ. ಅದರ ಜೊತೆಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯನ್ನೇ ವೇದಿಕೆಯಾಗಿಸಿಕೊಂಡು ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗಾಗಿ ಸರ್ಕಾರ ಜಾರಿಗೊಳಿಸಿರುವ ಹಲವಾರು ಯೋಜನೆಯ ಸವಲತ್ತುಗಳ ಬಗ್ಗೆಯೂ ಸಮುದಾಯದಲ್ಲಿ ಅರಿವು ಮೂಡಿಸಬೇಕು. ಯೋಜನೆಯ ಸೌಲಭ್ಯವನ್ನು ಅರ್ಹರಿಗೆ ತಲುಪಿಸುವ ಕಾರ್ಯವನ್ನು ಸಮಿತಿ ಸದಸ್ಯರು ಪ್ರಾಮಾಣಿಕವಾಗಿ ಮಾಡಬೇಕು. ನಿಜವಾಗಿ ದೌರ್ಜನ್ಯಕ್ಕೆ ಒಳಗಾಗುತ್ತಿರುವವರನ್ನು ಗುರುತಿಸಿ ಅವರಿಗೆ ಪರಿಹಾರ ಹಾಗೂ ಸೌಲಭ್ಯವನ್ನು ತಲುಪಿಸಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಿ. ಸತ್ಯಭಾಮ ಮಾತನಾಡಿ, ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಂತ್ರಸ್ತರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಸರ್ಕಾರ ಪರಿಹಾರ ನೀಡುವ ಹಾಗೂ ತಪ್ಪಿತಸ್ಥರಿಗೆ ಶಿಕ್ಷಿಸುವ ಕಾಯ್ದೆ ಜಾರಿಗೊಳಿಸಿದೆ. ಆದರೆ ಕಾಯ್ದೆಯ ಉಪಯೋಗದ ಜೊತೆಗೆ ದುರುಪಯೋಗವೂ ಆಗುತ್ತಿದೆ. ಆದ್ದರಿಂದ ಕಾಯ್ದೆಯ ದುರುಪಯೋಗವಾಗದಂತೆ ಎಚ್ಚರ ವಹಿಸುವುದು ಅಗತ್ಯ ಎಂದರು.

ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟರ ಮನೋ ಭಾವದಲ್ಲೂ ಬದಲಾವಣೆಯಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಸರ್ಕಾರ ಪರಿಶಿಷ್ಟರಿಗಾಗಿಯೇ ಅನುದಾನದಲ್ಲಿ ಶೇ. 22.75 ರಷ್ಟು ಮೀಸಲಿಡುತ್ತಿದ್ದು, ಪರಿಶಿಷ್ಟರ ಕಾಲೋನಿಗಳಿಗೆ ಉತ್ತಮ ರಸ್ತೆ, ಚರಂಡಿ, ಮೂಲ ಸೌಕರ್ಯ, ಉತ್ತಮ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮಕ್ಕಳಿಗೆ ಉಚಿತ ಹಾಗೂ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ಹಾಸ್ಟೆಲ್ಗಳ ಸೌಲಭ್ಯವನ್ನು ಅತ್ಯುತ್ತಮವಾಗಿ ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಕೆ. ಅರುಣ್‌ ಮಾತನಾಡಿ, ಗ್ರಾಮಗಳಲ್ಲಿ ಎಲ್ಲ ವರ್ಗದವರೂ ಸೌಹಾರ್ದಯುತವಾಗಿ ಬಾಳಬೇಕು. ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಪರಿಶಿಷ್ಟರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.

ಸಮಿತಿ ಸದಸ್ಯ ಅರುಣ್‌ಕುಮಾರ್‌ ಮಾತನಾಡಿ, ಚಳ್ಳಕೆರೆ, ಮೊಳಕಾಲ್ಮೂರು ತಾಲೂಕುಗಳ ಗಡಿ ಭಾಗಗಳಲ್ಲಿ ಈಗಲೂ ಅಸ್ಪ್ರಶ್ಯತೆ ಜೀವಂತವಾಗಿದೆ. ಅಧಿಕಾರಿಗಳು ಈ ಗ್ರಾಮಗಳತ್ತ ಗಮನ ಹರಿಸಿ ಶೋಷಣೆಯನ್ನು ತಪ್ಪಿಸಬೇಕು. ಬಾಧಿತರಿಗೆ ಪರಿಹಾರ ಹಾಗೂ ಸೌಲಭ್ಯ ಒದಗಿಸಬೇಕು. ಗಡಿ ಗ್ರಾಮಗಳಲ್ಲಿ ಪರಿಶಿಷ್ಟರ ರಕ್ಷಣೆಗಾಗಿ ಇರುವ ಕಾನೂನು ಹಾಗೂ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸುವ ಕಾರ್ಯ ಆಗಬೇಕಿದೆ ಎಂದು ಒತ್ತಾಯಿಸಿದರು.

ಸಭೆಯಲ್ಲಿ ಡಿವೈಎಸ್‌ಪಿ ವಿಜಯಕುಮಾರ್‌ ಸಂತೋಷ್‌, ನಗರಸಭೆ ಪೌರಾಯುಕ್ತ ಚಂದ್ರಪ್ಪ, ಸಮಿತಿ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.

41.90 ಲಕ್ಷ ರೂ. ಪರಿಹಾರ ವಿತರಣೆ
2019-20ನೇ ಸಾಲಿನಲ್ಲಿ ಪರಿಶಿಷ್ಟರ ಮೇಲಿನ ಕೊಲೆ-1, ಅತ್ಯಾಚಾರ-2, ಜಾತಿ ನಿಂದನೆ-17 ಸೇರಿದಂತೆ ಒಟ್ಟು 20 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 41.90 ಲಕ್ಷ ರೂ. ಗಳ ಪರಿಹಾರಧನವನ್ನು ಸಂತ್ರಸ್ತರಿಗೆ ವಿತರಿಸಲಾಗಿದೆ. 34 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಇವೆ ಎಂದು ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ನಾಗರಾಜ್‌ ಮಾಹಿತಿ ನೀಡಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ