ಅಂಗನವಾಡಿಯಲ್ಲೇ ಎಲ್ ಕೆಜಿ ಆರಂಭಿಸಿ

ಮೊಟ್ಟೆ, ತರಕಾರಿ ಬಾಕಿ ಬಿಲ್ ಪಾವತಿಸಲು ಆಗ್ರಹ•ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿಗೊಳಿಸಿ

Team Udayavani, Jul 11, 2019, 9:56 AM IST

ಕಲಬುರಗಿ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಖಂಡರಾದ ಮಾರುತಿ ಮಾನ್ಪಡೆ, ಶರಣಬಸಪ್ಪ ಮಮಶೆಟ್ಟಿ, ಶಾಂತಾ ಘಂಟಿ, ಗೌರಮ್ಮ ಪಾಟೀಲ ಹಾಗೂ ಕಾರ್ಯಕರ್ತೆಯರು ಪಾಲ್ಗೊಂಡಿದ್ದರು.

ಕಲಬುರಗಿ: ಅಂಗನವಾಡಿ ಕೇಂದ್ರಗಳಲ್ಲೇ ಎಲ್ಕೆಜಿ ಮತ್ತು ಯುಕೆಜಿ ಆರಂಭಿಸುವ ಮೂಲಕ ಅವುಗಳ ಬಲವರ್ಧನೆ ಪಡಿಸುವುದು ಸೇರಿದಂತೆ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಬುಧವಾರ ಬೃಹತ್‌ ಪ್ರತಿಭಟನೆ ನಡೆಯಿತು.

ಜಿಲ್ಲಾಧಿಕಾರಿ ಕಚೇರಿ ಎದುರಿಗಿನ ಐವಾನ್‌-ಎ-ಶಾಹಿ ರಸ್ತೆಯಲ್ಲಿ ಹಿರಿಯ ಮುಖಂಡ ಮಾರುತಿ ಮಾನ್ಪಡೆ, ಅಂಗನವಾಡಿ ನೌಕಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷೆ ಶಾಂತಾ ಘಂಟಿ, ಜಿಲ್ಲಾಧ್ಯಕ್ಷೆ ಗೌರಮ್ಮ ಪಾಟೀಲ ನೇತೃತ್ವದಲ್ಲಿ ಜಿಲ್ಲೆಯ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.

ರಾಜ್ಯದಲ್ಲಿ 62,580 ಅಂಗನವಾಡಿ ಕೇಂದ್ರಗಳು, 3,331 ಸಣ್ಣ ಅಂಗನವಾಡಿ ಕೇಂದ್ರಗಳು 45 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿವೆ. ಅಂಗನವಾಡಿ ಕೇಂದ್ರಗಳ ಮೂಲಕ 0 ರಿಂದ 3 ವರ್ಷದೊಳಗಿನ 23,23,347 ಮಕ್ಕಳು, 3 ರಿಂದ 6 ವರ್ಷದೊಳಗಿನ 16,40,170 ಮಕ್ಕಳು, 8,95,465 ಗರ್ಭಿಣಿಯರು ಸರ್ಕಾರದ ಫಲಾನುಭವಿಗಳಿದ್ದಾರೆ. ರಾಜ್ಯದ ಮಾನವ ಸಂಪನ್ಮೂಲ ಬೆಳವಣಿಗೆಗೆ ಅಂಗನವಾಡಿ ಕೇಂದ್ರಗಳ ಮುಖ್ಯ ಪಾತ್ರವಹಿಸುತ್ತಿವೆ. ಇಂತಹ ಕೇಂದ್ರಗಳನ್ನು ಬಲಪಡಿಸುವ ಬದಲಿಗೆ ದುರ್ಬಲಗೊಳಿಸುವ ಹುನ್ನಾರವನ್ನು ಸರ್ಕಾರಗಳು ಮಾಡುತ್ತಿವೆ ಎಂದು ಆರೋಪಿಸಿದರು.

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿರುವುದು ಸೂಕ್ತವಲ್ಲ. ಇದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿ ಕುಸಿಯುತ್ತದೆಯೇ ಹೊರತು ಯಾವುದೇ ಪ್ರಯೋಜನ ಇಲ್ಲ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲೇ ರಾಜ್ಯ ಸರ್ಕಾರ ಎಲ್ಕೆಜಿ, ಯುಕೆಜಿ ಆರಂಭಿಸಬೇಕು. ಸೇವಾ ಜೇಷ್ಠತೆ ಆಧಾರದ ಮೇಲೆ ಕನಿಷ್ಠ ವೇತನ 18 ಸಾವಿರ ರೂ. ಜಾರಿ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಮಾತೃಪೂರ್ಣ ಯೋಜನೆ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿಯರನ್ನು ನೇಮಿಸಬೇಕು. ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ ಭರ್ತಿ ಮಾಡಬೇಕು. ಅಂಗನವಾಡಿ ಕೇಂದ್ರಗಳಿಗೆ ಕೇಂದ್ರ ಸರ್ಕಾರ ಅನುದಾನ ಕಡಿತಗೊಳಿಸಿದ್ದು, ಆ ಅನುದಾನ ನೀಡುವುದನ್ನು ಮುಂದುವರಿಸಬೇಕು. ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ಹಣ ವರ್ಗಾವಣೆ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಯನ್ನು ರಾಜ್ಯ ಸರ್ಕಾರ ಒಪ್ಪಬಾರದು ಎಂದು ಆಗ್ರಹಿಸಿದರು.

ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ನಿಯಮಾವಳಿ ರಚಿಸಬೇಕು. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮೂರ್‍ನಾಲ್ಕು ತಿಂಗಳಿಂದ ಕಾರ್ಯಕರ್ತೆಯರಿಗೆ ಗೌರವ ಧನ ಪಾವತಿಸಿಲ್ಲ. ಮೊಟ್ಟೆ ಮತ್ತು ತರಕಾರಿ ಹಣ ಬಿಡುಗಡೆಯಾಗಿಲ್ಲ. ಸಕಾಲಕ್ಕೆ ಗ್ಯಾಸ್‌ ಸಿಲಿಂಡರ್‌ ಪೂರೈಕೆಯಾಗುತ್ತಿಲ್ಲ. ಅಲ್ಲದೇ, ಕೆಲ ಕಡೆಗಳಲ್ಲಿ ಇನ್ನೂ ಗ್ಯಾಸ್‌ ಸಿಲಿಂಡರ್‌ ಹಾಗೂ ಒಲೆ ಕೂಡ ಪೂರೈಕೆಯಾಗಿಲ್ಲ ಎಂದು ಪ್ರತಿಭಟನಾನಿರತ ಕಾರ್ಯಕರ್ತೆಯರು ಆಕ್ರೋಶ ವ್ಯಕ್ತಪಡಿಸಿದರು.

ಕೂಡಲೇ ಕಾರ್ಯಕರ್ತೆಯರ ಗೌರವ ಧನ ಪಾವತಿಸಿ, ಮೊಟ್ಟೆ ಮತ್ತು ತರಕಾರಿ ಹಣ ಬಿಡುಗಡೆ ಮಾಡಬೇಕು. ಕಾಯಿಲೆಗಳಿಗೆ ತುತ್ತಾದ ಕಾರ್ಯಕರ್ತೆಯರ ಕುಟುಂಬಗಳಿಗೆ ಮರಣ ಪರಿಹಾರ ನಿಧಿ ಪಾವತಿಸಬೇಕು. ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರಗಳ ಕಟ್ಟಡಗಳ ದುರಸ್ತಿ ಮಾಡಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು, 5ರಿಂದ 10 ವರ್ಷ ಸೇವೆ ಸಲ್ಲಿಸಿದ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಹೆಚ್ಚುವರಿ ಗೌರವ ಧನ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ರೆಡ್ಡಿ, ಪ್ರತಿಭಟನಾ ನಿರತರಿಂದ ಮನವಿ ಪತ್ರ ಸ್ವೀಕರಿಸಿ, ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು. ಮಹಾದೇವಿ ಪೊಲಕಪಳ್ಳಿ, ಗಂಗಮ್ಮ ಬಿರಾದಾರ, ದೇವಮ್ಮ, ಶೇಕಮ್ಮ, ಗಜರಾಬಾಯಿ, ಕಲಾವತಿ, ಶಾಂತಾಬಾಯಿ ಚಿಂಚೋಳಿ, ಪುಷ್ಪಾ, ಪ್ರಭಾವತಿ, ಕುಲಸುಂಬಿ, ಆನಂದಮ್ಮ ಹಾಗೂ ಸಾವಿರಾರು ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಅನುದಾನ ವಿಳಂಬ ಮತ್ತು ಕೆಲ ತಾಂತ್ರಿಕ ಸಮಸ್ಯೆಗಳಿಂದಾಗಿ ಮೊಟ್ಟೆ ಮತ್ತು ತರಕಾರಿ ಬಿಲ್ ಪಾವತಿಸಲು ತಡವಾಗಿದೆ. ಮುಂದಿನ ಎರಡ್ಮೂರು ದಿನಗಳಲ್ಲಿ ಬಾಕಿ ಬಿಲ್ ಪಾವತಿಗೆ ಕ್ರಮಕೈಗೊಳ್ಳಲಾಗುವುದು. ಉಳಿದಂತೆ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸಲಾಗುವುದು.
ಮಲ್ಲಿಕಾರ್ಜುನ ರೆಡ್ಡಿ,
ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ