ಮುಂಗಾರು ಆರಂಭ: ಭತ್ತದ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಿ

Team Udayavani, Jun 17, 2019, 5:21 AM IST

ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಭತ್ತ ಹಾಗೂ ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಸಕಾಲದಲ್ಲಿ ವಿತರಿಸಬೇಕು ಮತ್ತು ಅಗತ್ಯ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ‌ ಬಿ.ಎ.ಹರೀಶ್‌ ಅವರು ಸೂಚನೆ ನೀಡಿದ್ದಾರೆ.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಶನಿವಾರ ನಡೆದ ಜಿ.ಪಂ. ಮಾಸಿಕ ಕೆಡಿಪಿ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೃಷಿಕರಿಗೆ ಬೇಕಿರುವ ಭತ್ತದ ಹಾಗೂ ಮುಸುಕಿನ ಜೋಳ ಬಿತ್ತನೆ ಬೀಜ ವಿತರಣೆ ಮಾಡಬೇಕು. ಕೃಷಿ ಕ್ಷೇತ್ರ ವಿಸ್ತರಣೆಗೆ ಕ್ರಮ ಕೈಗೊಳ್ಳುವಂತೆ ಜಿ.ಪಂ.ಅಧ್ಯಕ್ಷರು ಹೇಳಿದರು.

ಈ ಸಂಬಂಧ ಮಾಹಿತಿ ನೀಡಿದ ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ರಾಜು ಅವರು ಈಗಾಗಲೇ ಭತ್ತ ಹಾಗೂ ಮುಸುಕಿನ ಜೋಳದ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ಜೊತೆಗೆ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳಲಾಗಿದೆ ಎಂದರು.

ಜಿಲ್ಲೆಯಲ್ಲಿ 34 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದೆ. ಹಾಗೆಯೇ 4 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಮಣ್ಣು ಆರೋಗ್ಯ ಕಾರ್ಡ್‌

ಮಣ್ಣು ಆರೋಗ್ಯ ಪರೀಕ್ಷೆ ಸಂಬಂಧಿಸಿದಂತೆ 45,859 ರೈತರಿಗೆ ಮಣ್ಣು ಆರೋಗ್ಯ ಕಾರ್ಡ್‌ ವಿತರಿಸಲಾಗಿದೆ ಎಂದು ಅವರು ಹೇಳಿದರು.

ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳ ನಿರ್ಮಾಣ, ಟಿಲ್ಲರ್‌, ಟಾರ್ಪಲ್ಗಳ ವಿತರಣೆ, ಕೃಷಿ ಯಂತ್ರೋಪಕರಣಗಳನ್ನು ಬಾಡಿಗೆ ಮೂಲಕ ನೀಡುವುದು ಹೀಗೆ ನಾನಾ ಕಾರ್ಯಕ್ರಮಗಳನ್ನು ಕೃಷಿ ಇಲಾಖೆ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜು ಅವರು ತಿಳಿಸಿದರು.

ಜಿಲ್ಲೆಯಲ್ಲಿ ಅತಿರ ಭತ್ತ ಹೆಚ್ಚಾಗಿ ಬೆಳೆಯುತ್ತಾರೆ. ಆದರೆ ಬೆಂಬಲ ಬೆಲೆಯಡಿ ಇದನ್ನು ಖರೀದಿಸಲಾಗುತ್ತಿಲ್ಲ ಎಂಬ ಮಾಹಿತಿಯನ್ನು ಆಹಾರ ಇಲಾಖೆ ಉಪ ನಿರ್ದೇಶಕರು ತಿಳಿಸಿದರು. ನಿಫಾ ವೈರಸ್‌ ಪಕ್ಕದ ರಾಜ್ಯದಲ್ಲಿ ಹರಡುತ್ತಿದ್ದು, ಜಿಲ್ಲೆಯಲ್ಲಿಯೂ ಸಹ ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಅಗತ್ಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಹಾಗೂ ಮಳೆಗಾಲದಲ್ಲಿ ಹರಡುವ ರೋಗಗಳನ್ನು ನಿಯಂತ್ರಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಜಿ.ಪಂ.ಅಧ್ಯಕ್ಷರು ಸಲಹೆ ಮಾಡಿದರು.

ಆಸ್ಪತ್ರೆಗಳಲ್ಲಿ ಶುಚಿತ್ವ ಕಾಪಾಡುವುದು, ಗಿಡಗಂಟಿಗಳನ್ನು ಕಡಿಸುವಂತೆ ಜಿ.ಪಂ. ಅಧ್ಯಕ್ಷರು ಸಲಹೆ ಮಾಡಿದರು. ಶನಿವಾರಸಂತೆ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸುವಂತೆ ಸರೋಜಮ್ಮ ಅವರು ಸೂಚಿಸಿದರು. ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಹಾಡಿಯಲ್ಲಿನ ದಿಡ್ಡಳ್ಳಿ ಗಿರಿಜನರಿಗೆ 538 ಮನೆಗಳಲ್ಲಿ 338 ಮನೆಗಳು ಪೂರ್ಣಗೊಂಡಿದ್ದು, ಇವರಲ್ಲಿ 9 ಕುಟುಂಬ ಹೊರತುಪಡಿಸಿ ಉಳಿದವರು ವಾಸ ಮಾಡುತ್ತಿದ್ದಾರೆ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್‌ ಅವರು ಮಾಹಿತಿ ನೀಡಿದರು.

ಶಾಲೆಗಳ ದುರಸ್ತಿ ಮತ್ತಿತರ ಬಗ್ಗೆ ಗಮನ ಹರಿಸಬೇಕು. ಶಾಲಾ ಸುರಕ್ಷತೆ ಸಂಬಂಧಿಸಿದಂತೆ ಯುನಿಸೆಫ್ ವತಿಯಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಈ ಸಂಬಂಧ ಅಗತ್ಯ ಸಹಕಾರ ನೀಡುವಂತೆ ಜಿ.ಪಂ. ಸಿಇಒ ಲಕ್ಷ್ಮೀಪ್ರಿಯಾ ಅವರು ಸಲಹೆ ಮಾಡಿದರು.

ಜಿ.ಪಂ. ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜಮ್ಮ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಚ್ಚಾಡೋ, ಜಿ.ಪಂ.ಉಪಕಾರ್ಯದರ್ಶಿ ಗುಡೂರು ಭೀಮಸೇನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಅರುಂಧತಿ, ತಾ.ಪಂ. ಇಒಗಳಾದ ಲಕ್ಷ್ಮಿ, ಸುನಿಲ್ ಕುಮಾರ್‌, ಜಯಣ್ಣ ಕ.ಸಾ.ಪ ಜಿಲ್ಲಾ ಘಟಕದ ಅಧ್ಯಕ್ಷರಾದ ಲೋಕೇಶ್‌ ಸಾಗರ್‌ , ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ನಂದ, ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ನಾನಾ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ಔಷಧ ಲಭ್ಯವಿಲ್ಲ

ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್‌ ಕಾರ್ಯಪ್ಪ, ಅವರು ಮಡಿಕೇರಿಯ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ನಾಯಿ ಕಡಿತಕ್ಕೆ ಔಷಧಿ ಲಭ್ಯವಿಲ್ಲದೆ ಬೇರೆ ಕಡೆಗೆ ಕಳುಹಿಸುತ್ತಿದ್ದಾರೆ. ಅಗತ್ಯ ಔಷಧಿ ದಾಸ್ತಾನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ಚೇಲಾವರ ಜಲಪಾತದಲ್ಲಿ ಗುಂಡಿ ಮುಚ್ಚುವಂತೆ ಹಲವು ವರ್ಷಗಳಿಂದ ಒತ್ತಾಯಿಸುತ್ತ ಬರಲಾಗಿದೆ. ಆದರೆ ಇದುವರೆಗೂ ಕಾರ್ಯಗತವಾಗಿಲ್ಲ ಎಂದು ಅವರು ಅತೃಪ್ತಿ ವ್ಯಕ್ತಪಡಿಸಿದರು.

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ