ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಆಕ್ರೋಶ

Team Udayavani, Dec 22, 2017, 4:49 PM IST

ಕೋಲಾರ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮನ ಮೇಲೆ ಅತ್ಯಾಚಾರ ಎಸಗಿ, ಹತ್ಯೆಗೈದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ನಗರದ ಕಾಲೇಜು ವೃತ್ತದಲ್ಲಿ ಎಬಿವಿಪಿ, ಬಹುಜನ ವಿದ್ಯಾರ್ಥಿ ಸಂಘ, ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗಾಂಧಿ ವನದಲ್ಲಿ ಸಿಪಿಎಂ ಮುಖಂಡರು ಗುರುವಾರ ಪ್ರತಿಭಟನೆ ನಡೆಸಿದರು.

ನಗರದ ಕಾಲೇಜು ವೃತ್ತದಲ್ಲಿ ರಸ್ತೆ ತಡೆದು, ಪ್ರತಿಭಟನೆ ನಡೆಸಿದ ಎಬಿವಿಪಿ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ವಿದ್ಯಾರ್ಥಿನಿ ದಾನಮ್ಮ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದನ್ನು ತೀವ್ರವಾಗಿ ಖಂಡಿಸಿದರು.

ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರಕಾರ, ಗೃಹಮಂತ್ರಿಗಳನ್ನು ಆಗ್ರಹಿಸಿದರು.

ಪ್ರಕರಣ ಮುಚ್ಚಿಹಾಕಲು ಯತ್ನ: ಈ ವೇಳೆ ಮಾತನಾಡಿದ ಮುಖಂಡರು, ಘಟನೆಯ ಕುರಿತಾಗಿ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿರುವುದು ಸಹ ತಿಳಿದುಬಂದಿದೆ. ರಾಜ್ಯದ ಮುಖ್ಯಮಂತ್ರಿಯವರು ಪ್ರವಾಸದ ನೆಪವೊಡ್ಡಿ, ಇಡೀ ಪ್ರಕರಣವನ್ನು ಮುಚ್ಚಿಹಾಕಲು ವಿಜಯಪುರ ಎಸ್ಪಿಯೊಂದಿಗೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದರು.

ಆರೋಪಿಗಳಿಗೆ ಶಿಕ್ಷೆ ನೀಡಿ: ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ನಿರಂತರವಾಗುತ್ತಿದ್ದು, ಸದರಿ ಪ್ರಕರಣದಲ್ಲಿ ಕೂಡಲೇ ಆರೋಪಿಗಳನ್ನು ಬಂಧಿಸಿ, ಶಿಕ್ಷೆ ನೀಡಿದಲ್ಲಿ ಇಂತಹ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಒತ್ತಾಯಿಸಿದರು. 

ಈ ಸಂದರ್ಭದಲ್ಲಿ ಎಬಿವಿಪಿ ತಾಲೂಕು ಸಂಚಾಲಕ ನವೀನ್‌, ನಗರ ಕಾರ್ಯದರ್ಶಿ ವಿಜಯ್‌ ಕುಮಾರ್‌, ವಿದ್ಯಾರ್ಥಿಗಳಾದ ನಾಗೇಶ್‌, ಅರುಣ್‌, ಅರ್ಪಿತಾ, ಉಷಾ, ಪ್ರಮೀಳ, ವಂದಿತ, ಹರ್ಷಿತಾ, ವಿಜಯಲಕ್ಷ್ಮೀ ಉಪಸ್ಥಿತರಿದ್ದರು.

ಬಹುಜನ ವಿದ್ಯಾರ್ಥಿ ಸಂಘದಿಂದ ರಸ್ತೆತಡೆ: ಬಹುಜನ ವಿದ್ಯಾರ್ಥಿ ಸಂಘ ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ವತಿ ಯಿಂದ ನಗರದ ಕಾಲೇಜು ವೃತ್ತದಲ್ಲಿ ಕೆಲಕಾಲ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ ಮುಖಂಡರು ಹಾಗೂ ವಿದ್ಯಾರ್ಥಿಗಳು, ದಾನಮ್ಮ ಸಾವಿನ ಪ್ರಕರಣದಲ್ಲಿ ಆರೋಪಿಗಳನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಸರಕಾರವು ಕೂಡಲೇ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.

ಎರಡು ದಿನಗಳ ಒಳಗಾಗಿ ಆರೋಪಿಗಳನ್ನು ಬಂಧಿಸಿ, ಬಾಲಕಿಯ ಕುಟುಂಬಕ್ಕೆ ಸೂಕ್ತ ನ್ಯಾಯ ದೊರೆಕಿಸಿಕೊಡದಿದ್ದಲ್ಲಿ, ಡಿ.30ರ ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಘೇರಾವ್‌ ಹಾಕಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಈ ಸಂದರ್ಭದಲ್ಲಿ ಬಹುಜನ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಹೂಹಳ್ಳಿ ನಾಗರಾಜ್‌, ದಲಿತ ಮುಖಂಡರಾದ ಟಿ.ವಿಜಯ್‌ಕುಮಾರ್‌, ವಕ್ಕಲೇರಿ ರಾಜಪ್ಪ, ಆರ್‌ಪಿಐ ಅಂಬರೀಶ್‌, ಅಪ್ಪಿ ನಾರಾಯಣಸ್ವಾಮಿ, ಪಾಲ್ಗುಣ,ಶಾಂತಮ್ಮ ಮತ್ತಿತರರು ಭಾಗವಹಿಸಿದ್ದರು.

ಸಿಪಿಎಂ ಪ್ರತಿಭಟನೆ: ವಿದ್ಯಾರ್ಥಿನಿ ದಾನಮ್ಮ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸಿಪಿಐಎಂ ಮುಖಂಡರು ನಗರದ ಗಾಂಧಿವನದಲ್ಲಿ ಪ್ರತಿಭಟನೆ ನಡೆಸಿದರು. ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು. ಈ ಸಂದರ್ಭದಲ್ಲಿ ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಗಾಂಧಿನಗರ ನಾರಾಯಣಸ್ವಾಮಿ, ಮುಖಂಡರಾದ ಟಿ.ಎಂ.ವೆಂಕಟೇಶ್‌, ವಿಜಿಕೃಷ್ಣ, ಸುಶೀಲಾ, ವಿಜಯಮ್ಮ, ಆಶಾ ಮತ್ತಿತರರು ಭಾಗವಹಿಸಿದ್ದರು. 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ