ಪಠ್ಯಪುಸ್ತಕ-ಸಮವಸ್ತ್ರ ವಿತರಣೆಗೆ ಆಗ್ರಹಿಸಿ ಮನವಿ
Team Udayavani, Aug 30, 2020, 4:12 PM IST
ರಾಯಚೂರು: ಸರ್ಕಾರಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ, ಸಮವಸ್ತ್ರ ವಿತರಣೆ ಹಾಗೂ ಬಿಸಿಯೂಟದ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ ರಾಜ್ಯ ಮಹಿಳಾ ಒಕ್ಕೂಟದ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಲಾಕ್‌ಡೌನ್ ಜಾರಿಯಾದಾಗಿನಿಂದ ಶಾಲಾ-ಕಾಲೇಜುಗಳನ್ನು ಮುಚ್ಚಲಾಗಿದೆ. ಇದರಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗುತ್ತಿದೆ. ಲಾಕ್‌ಡೌನ್ ವೇಳೆ ರಾಜ್ಯದಲ್ಲಿ ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ಧತಿ, ವಲಸೆ, ಮಕ್ಕಳ ಮೇಲಿನ ದೌರ್ಜನ್ಯದಂಥ ಪ್ರಕರಣಗಳು ಹೆಚ್ಚುತ್ತಿವೆ ಎಂದು ದೂರಿದರು. ರಾಜ್ಯದ ಎಲ್ಲ ಕಿರಿಯ, ಹಿರಿಯ ಹಾಗೂ ಪ್ರೌಢಶಾಲೆ, ಖಾಸಗಿ ಶಾಲೆಗಳ ಮಕ್ಕಳಿಗೆ ಕೂಡಲೇ ಪಠ್ಯಪುಸ್ತಕ ವಿತರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಎಲ್ಲ ಮಕ್ಕಳಿಗೂ ಸಮವಸ್ತ್ರ ವಿತರಿಸಬೇಕು. ಲಾಕ್‌ಡೌನ್ ವೇಳೆ ಪೌಷ್ಟಿಕ ಆಹಾರದ ಕೊರತೆಯಿಂದ ಬಳಲುತ್ತಿರುವ ಎಲ್ಲ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಮುಂದುವರಿಸ ಬೇಕು. ಸಮೀಕ್ಷೆಯಲ್ಲಿ ಬಿಟ್ಟು ಹೋದ ದೇವದಾಸಿಯರನ್ನು ಸರ್ಕಾರದ ದೇವದಾಸಿ ಪಟ್ಟಿಗೆ ಸೇರಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿದರು.
ಒಕ್ಕೂಟದ ಜಿಲ್ಲಾಧ್ಯಕ್ಷೆ ವಿದ್ಯಾ ಪಾಟೀಲ, ಮೋಕ್ಷಮ್ಮ ಇತರರಿದ್ದರು.