ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಪದವಿ ಪೂರೈಸಿದವರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಿ • ನೇಮಕಾತಿ ನಿಯಮ ಬದಲಾಯಿಸಿ

Team Udayavani, Jul 10, 2019, 1:27 PM IST

ರಾಮನಗರದಲ್ಲಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿ ಸರ್ಕಾರಿ ಪ್ರಾಥಮಿಕ ಶಾಲೆಗಳ ಶಿಕ್ಷಕರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ರಾಮನಗರ: ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪದವಿ ಪೂರೈಸಿರುವ ಶಿಕ್ಷಕರನ್ನು ಪದವೀಧರ ಶಿಕ್ಷಕರೆಂದು ಪರಿಗಣಿಸಬೇಕು. ವೃಂದ ಮತ್ತು ನೇಮಕಾತಿ ನಿಯಮಗಳನ್ನು ಬದಲಾಯಿಸುವಂತೆ ಮತ್ತು ಪದವೀಧರ ಶಾಲಾ ಶಿಕ್ಷಕರ ವೇತನ ಶ್ರೇಣಿಯನ್ನು ನಿಗದಿಪಡಿಸುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಆಶ್ರಯದಲ್ಲಿ ನೂರಾರು ಶಿಕ್ಷಕರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣ (ಡೀಸಿ ಕಚೇರಿ) ಮುಂಭಾಗ ಜಮಾಯಿಸಿದ ಶಿಕ್ಷಕರು, ತಮ್ಮ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

ಸರ್ಕಾರ ತಮ್ಮ ಬೇಡಿಕೆ ಪರಿಗಣಿಸಿಲ್ಲ: 2017ರಲ್ಲಿ ರಾಜ್ಯ ಸರ್ಕಾರವು ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ತಿದ್ದುಪಡಿ ತಂದು 2014ಕ್ಕೂ ಮುನ್ನ ನೇಮಕಗೊಂಡಿರುವ ಹಾಲಿ ಸೇವಾನಿರತ ಪದವೀಧರ ಶಿಕ್ಷಕರನ್ನು 1ರಿಂದ 5ನೇ ತರಗತಿಗಳಿಗೆ ಪದನಿಯೋಗಗೊಳಿಸಿರುವುದನ್ನು ಈ ಮೊದಲೆ ಖಂಡಿಸಿ, ಶಿಕ್ಷಕರ ಅಸಮಾಧಾನವನ್ನು ಸರ್ಕಾರದ ಗಮನಕ್ಕೆ ತರಲಾಗಿತ್ತು. ಬೋಧನೆಯಲ್ಲಿ 10, 15 ವರ್ಷಗಳ ಅನುಭವ ಇರುವ ಸೇವಾನಿರತ ಪದವೀಧರ ಶಿಕ್ಷಕರನ್ನು ಪದೋನ್ನತಿಗೆ ಪರಿಗಣಿಸಿಲ್ಲ ಎಂಬ ಅಸಮಾಧಾನವನ್ನು ಕೂಡ ತಿಳಿಸಲಾಗಿತ್ತು. ಹಾಲಿ ಸೇವಾನಿರತ ಪದವೀಧರ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಮನವಿ ಮಾಡಲಾಗಿತ್ತು. ಆದರೆ, ಸರ್ಕಾರ ತಮ್ಮ ಬೇಡಿಕೆಯನ್ನು ಪರಿಗಣಿಸಿಲ್ಲ, ಹೀಗಾಗಿ ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳ ಶಿಕ್ಷಕರು ಪ್ರತಿಭಟನೆ ನಡೆಸುತ್ತಿರುವುದಾಗಿ ಪ್ರತಿಭಟನಾಕಾರರು ತಿಳಿಸಿದರು.

ಮೂರು ವರ್ಷದಿಂದ ಶಿಕ್ಷಕರ ವರ್ಗಾವಣೆಯಾಗಿಲ್ಲ: ಕಳೆದ ಮೂರು ವರ್ಷಗಳಿಂದ ಶಿಕ್ಷಕರ ವರ್ಗಾವಣೆ ಆಗಿಲ್ಲ. ಈಗ ವರ್ಗಾವಣೆ ಪ್ರಕ್ರಿಯೆ ಆರಂಭವಾಗಿದೆ. ಈ ಪ್ರಕ್ರಿಯೆ ಮುಗಿದ ತಕ್ಷಣ ಅಕ್ಟೋಬರ್‌ ತಿಂಗಳಲ್ಲಿ ಮತ್ತೂಮ್ಮೆ ಕೇವಲ ಕೋರಿಕೆ ವರ್ಗಾವಣೆ ನಡೆಸಬೇಕು ಎಂದು ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದರು.

ನೂತನ ಪಿಂಚಣಿ ಯೋಜನೆ ರದ್ದು ಮಾಡಿ: ನೂತನ ಪಿಂಚಣಿ ಯೋಜನೆಯನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿದ ಪ್ರತಿಭಟನಾಕಾರರು, ಹಳೆ ಪಿಂಚಣಿ ಪದ್ಧತಿಯನ್ನೇ ಮತ್ತೆ ಜಾರಿ ಮಾಡಬೇಕು. ರಾಜ್ಯದ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಲ್ಲಿರುವ ನ್ಯೂನತೆ ಸರಿಪಡಿಸಬೇಕು. ಪ್ರತಿ ವಿಷಯಕ್ಕೆ ಒಬ್ಬ ಶಿಕ್ಷಕರನ್ನು ಪರಿಗಣಿಸಬೇಕು. ಶಿಕ್ಷಕ-ವಿದ್ಯಾರ್ಥಿ ಅನುಪಾತ ಗುರುತಿಸುವಾಗ, ಮುಖ್ಯಶಿಕ್ಷಕರು, ದೈಹಿಕ ಶಿಕ್ಷಕರುಗಳನ್ನು ಹೊರತುಪಡಿಸಿ, ಹೆಚ್ಚುವರಿ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಶಿಕ್ಷಕರು ಸರ್ಕಾರವನ್ನು ಆಗ್ರಹಿಸಿದರು.

6ನೇ ವೇತನ ಆಯೋಗದ ಅಂತಿಮ ವರದಿಯ ಶಿಪಾರಸ್ಸಿನ ಪ್ರಕಾರ ಮುಖ್ಯ ಗುರುಗಳಿಗೆ 10, 15, 20, 25, 30 ವರ್ಷದ ಬಡ್ತಿಯನ್ನು ನೀಡಬೇಕು. ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಉಪನಿರ್ದೇಶಕರ ಹುದ್ದೆಯವರೆಗೂ ಬಡ್ತಿಯನ್ನು ನೀಡಬೇಕು ಎಂದು ಆಗ್ರಹಿಸಿದರು.

ಎಲ್ಲಾ ಸೇವಾ ಸೌಲಭ್ಯ ನೀಡಿ: ಗ್ರಾಮೀಣ ಕೃಪಾಂಕ ಶಿಕ್ಷಕರ ವಜಾ ಆದ ಸೇವೆಯನ್ನು ಸತತ ಸೇವೆ ಎಂದು ಪರಿಗಣಿಸಿ ಆರ್ಥಿಕ ಹಾಗೂ ಇನ್ನಿತರ ಎಲ್ಲಾ ಸೇವಾ ಸೌಲಭ್ಯ ನೀಡಬೇಕು ಎಂಬ ಒತ್ತಾಯವನ್ನು ಸರ್ಕಾರ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಮುಖ್ಯಮಂತ್ರಿಗಳಿಗೆ ಮಾಡಿಕೊಂಡ ಮನವಿಯನ್ನು ಶಿಕ್ಷಕರು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.

ಪ್ರತಿಭಟನಾ ಮೆರವಣಿಗೆ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಶಿಕ್ಷಕರು ನಗರದ ಗುರುಭವನದಿಂದ ಡೀಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ನೂರಾರು ಶಿಕ್ಷಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ