ಕಾನೂನು-ಸುವ್ಯವಸ್ಥೆ ನಿರ್ವಹಣೆಗೆ ಬದ್ಧ: ಈಶ್ವರಪ್ಪ
ಸರ್ಕಾರದಿಂದ ರೈತರ ಹಿತರಕ್ಷಣೆ- ಉದ್ಯೋಗ ಸೃಷ್ಟಿಗೆ ಕ್ರಮ
Team Udayavani, Jan 27, 2021, 6:36 PM IST
ಶಿವಮೊಗ್ಗ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರೇ ಹೇಳಿದಂತೆ ನ್ಯಾಯವೆಂದರೆ ಸ್ವಾತಂತ್ರ್ಯ. ಸಮಾನತೆ ಮತ್ತು ಸೌಹಾರ್ದ. ಅವರ ಈ ನ್ಯಾಯದ ಪರಿಕಲ್ಪನೆಯನ್ನು ಸಾಕಾರಗೊಳಿಸುವ ಧ್ಯೇಯ ನಮ್ಮದು. ಪ್ರಜಾಪ್ರಭುತ್ವ ವ್ಯವಸ್ಥೆಯ ಬೇರುಗಳು ದೃಢವಾಗುವುದೂ ಇದರಿಂದಲೇ ಎಂಬ ನಂಬಿಕೆ ನಮ್ಮದು. ದೇಶದ ಆಂತರಿಕ ಭದ್ರತೆ ಹಾಗೂ ಗಡಿಗಳನ್ನು ಕಾಪಾಡಿಕೊಂಡು ಶಾಂತಿ, ಕಾನೂನು ಸುವ್ಯವಸ್ಥೆ ನಿರ್ವಹಣೆಗೆ ನಾವು ಸದಾ ಸನ್ನದ್ಧರಾಗಿದ್ದೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ಮಂಗಳವಾರ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ, ಭದ್ರತಾ ತುಕಡಿಗಳ ಗೌರವ ವಂದನೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.
ಸಮ ಸಮಾಜ ನಿರ್ಮಾಣದ, ಸಂವಿಧಾನದ ಆಶಯವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ. ಎಲ್ಲಾ ವರ್ಗಗಳ ಜನರು ಸ್ವಾಭಿಮಾನ, ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣ ನಮ್ಮ ಗುರಿಯಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಸಕಾರಾತ್ಮಕ ಹೆಜ್ಜೆಗಳನ್ನಿಟ್ಟಿದೆ. ಕೃಷಿ, ಕೈಗಾರಿಕೆಗಳೆರಡಕ್ಕೂ ಸಮಾನ ಆದ್ಯತೆ ನೀಡುವ ಮೂಲಕ, ಅನ್ನದಾತರ ಹಿತರಕ್ಷಣೆ ಮತ್ತು= ಉದ್ಯೋಗ ಸೃಷ್ಟಿಗೆ ಒತ್ತು ನೀಡುತ್ತಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ, ಕೊರೊನಾ ಸಂಕಷ್ಟದ ಸಂದರ್ಭದಲ್ಲೂ ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾದಂತಹ ಯೋಜನೆಗಳ ಮೂಲಕ ಜನಸಾಮಾನ್ಯರ ಬದುಕನ್ನು ಕಟ್ಟುವ ಕಾರ್ಯದಲ್ಲಿ ಯಶಸ್ವಿಯಾಗಿದೆ. ಮಾಹಿತಿ ತಂತ್ರಜ್ಞಾನದ ಗರಿಷ್ಟ ಸದ್ಭಳಕೆಯಿಂದ ಜನಸ್ನೇಹಿ ಆಡಳಿತ ಒದಗಿಸುವ ನಿಟ್ಟಿನಲ್ಲಿ, ಡಿಜಿಟಲ್ ಇಂಡಿಯಾ ಯೋಜನೆ, ಭವಿಷ್ಯದ
ಭಾರತವನ್ನು ಅನಾವರಣಗೊಳಿಸುತ್ತಿದೆ. ಇದರ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ 400ಕ್ಕೂ ಅಧಿ ಕ ಕಾಮನ್ ಸರ್ವಿಸ್ ಸೆಂಟರ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಸರ್ಕಾರದ ಸೇವೆಗಳನ್ನು ಜನಸಾಮಾನ್ಯರು ಸುಲಭವಾಗಿ ಪಡೆಯಲು ಸಾಧ್ಯವಾಗಿದೆ ಎಂದರು.
ಭದ್ರಾವತಿಯಲ್ಲಿ ಕೇಂದ್ರ ಗೃಹಸಚಿವರು ಇತ್ತೀಚೆಗೆ ಚಾಲನೆ ನೀಡಿರುವ ಕ್ಷಿಪ್ರ ಕಾರ್ಯಪಡೆ ಘಟಕ ಸ್ಥಾಪನೆಯಿಂದ ಈ ಭಾಗದಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಲಾಗಿದೆ.ಶಿವಮೊಗ್ಗ ನಗರದಲ್ಲಿ ಇನ್ನೊಂದು ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಸಿದ್ಧತೆಗಳು ನಡೆದಿದ್ದು, ಇದರಿಂದ ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲು ಸಾಧ್ಯವಾಗಲಿದೆ. ಗ್ರಾಮೀಣ ಜನತೆಗೆ ಉದ್ಯೋಗ ಕಲ್ಪಿಸುವ ಮಹಾತ್ಮಾ ಗಾಂ ಧಿ ಉದ್ಯೋಗ ಖಾತ್ರಿ ಯೋಜನೆಯನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ದುಡಿಯುವ ಕೈಗಳಿಗೆ ಜಿಲ್ಲೆಯಲ್ಲಿ ದಾಖಲೆ ಪ್ರಮಾಣದಲ್ಲಿ ಉದ್ಯೋಗ ಒದಗಿಸಿರುವುದು ನಮ್ಮ ಹೆಗ್ಗಳಿಕೆ. ಉದ್ಯೋಗ ಖಾತ್ರಿ ಯೋಜನೆಯಡಿ ಈ ವರ್ಷ 119 ಕೋಟಿ ರೂ. ಸಂದಾಯ ಮಾಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ. ಮನೆ ಮನೆಗೆ ಗಂಗೆ ಯೋಜನೆ ಮೂಲಕ ಪ್ರತಿಯೊಬ್ಬರ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಯೋಜನೆಗೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದರು.
ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಮೂಲಕ, ರೈತರೇ ಸ್ವತಃ ತಮ್ಮ ಬೆಳೆ ಸಮೀಕ್ಷೆಯ ನಿಖರ ಮಾಹಿತಿಯನ್ನು ಒದಗಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಹಂಗಾಮಿನಲ್ಲಿ ಶೇ.100ರಷ್ಟು ಮತ್ತು ಹಿಂಗಾರು ಹಂಗಾಮಿನಲ್ಲಿ ಶೇ.75ರಷ್ಟು ಬೆಳೆ ಸಮೀಕ್ಷೆ ಪೂರ್ಣಗೊಳಿಸಲಾಗಿದೆ ಎಂದರು.
ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ “ಒಂದು ಜಿಲ್ಲೆ ಒಂದು ಉತ್ಪನ್ನ’ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಅನಾನಸ್ ಉತ್ಪನ್ನವನ್ನು ಆಯ್ಕೆ ಮಾಡಲಾಗಿದ್ದು, ಉತ್ಪನ್ನದ ಬ್ರಾಂಡಿಂಗ್ ಮತ್ತು ಮಾರುಕಟ್ಟೆಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ನಾವು ವಿಶೇಷ ಗಮನ ಹರಿಸಿದ್ದೇವೆ. ಸಾಗರ ರಸ್ತೆಯಲ್ಲಿರುವ ಕೈಗಾರಿಕಾ ವಸಾಹತಿನ ಮೂಲಸೌಕರ್ಯ ಉನ್ನತಿಗಾಗಿ 10 ಕೋಟಿ ರೂ. ಈಗಾಗಲೇ ಬಿಡುಗಡೆ ಮಾಡಲಾಗಿದೆ. ಕೈಗಾರಿಕೆಗಳಿಗೆ ಅಗತ್ಯವಾದ ರಸ್ತೆ, ಒಳಚರಂಡಿ, ವಿದ್ಯುತ್ ಸಂಪರ್ಕ ಸೇರಿದಂತೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಇಲ್ಲಿ ಕಲ್ಪಿಸಲಾಗುತ್ತಿದೆ
ಎಂದರು.
ಸಂಸದ ಬಿ.ವೈ. ರಾಘವೇಂದ್ರ, ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್, ಎಂಎಲ್‌ಸಿ ಎಸ್. ರುದ್ರೇಗೌಡ, ಎಸ್.ಎಸ್. ಜ್ಯೋತಿಪ್ರಕಾಶ್, ಜಿಲ್ಲಾ ಧಿಕಾರಿ ಕೆ.ಬಿ. ಶಿವಕುಮಾರ್, ಜಿಪಂ ಸಿಇಒ ಎಂ.ಎಲ್. ವೈಶಾಲಿ, ಎಸ್‌ಪಿ ಕೆ.ಎಂ. ಶಾಂತರಾಜು ಇತರರಿದ್ದರು.