ಹಾಳಾದ ಶಾಲಾ ಕಟ್ಟಡ ದುರಸ್ತಿಗೊಳಿಸಿ

ಕಳಪೆ ಕಾಮಗಾರಿ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಈಶ್ವರಪ್ಪ ಎಚ್ಚರಿಕೆ

Team Udayavani, Nov 17, 2019, 4:52 PM IST

ಶಿವಮೊಗ್ಗ: ಇತ್ತೀಚೆಗೆ ಬಿದ್ದ ಮಳೆಯಿಂದಾಗಿ ಹಾಳಾಗಿರುವ ಸರ್ಕಾರಿ ಶಾಲಾ ಕಟ್ಟಡಗಳನ್ನು ದುರಸ್ತಿಗೊಳಿಸಲು ಸರ್ಕಾರದಿಂದ ಅಗತ್ಯ ಅನುದಾನ ಮಂಜೂರಾಗಿದ್ದು, ಕೂಡಲೇ ಕಾಮಗಾರಿಗಳನ್ನು ಆರಂಭಿಸಿ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ ರಾಜ್‌, ಯುವಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಹೇಳಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಪ್ರಗತಿ ಹಾಗೂ ವಿವಿಧ ಇಲಾಖೆಗಳ ಮೂಲಕ ಅನುಷ್ಠಾನಗೊಳಿಸಲಾಗುತ್ತಿರುವ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೈಗೊಳ್ಳುವ ಕಾಮಗಾರಿಗಳು ತ್ವರಿತವಾಗಿ ಪೂರ್ಣಗೊಳ್ಳಬೇಕು. ಮಾತ್ರವಲ್ಲ ಗುಣಮಟ್ಟದ್ದಾಗಿರಬೇಕು. ಕಳಪೆ ಗುಣಮಟ್ಟದ ಕಾಮಗಾರಿಗಳಾಗಿರುವುದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಅನಿವಾರ್ಯ ಎಂದರು.

ದುರಸ್ತಿ ಮಾಡಬೇಕಾದ ನಗರದ ಒಟ್ಟು 84 ಶಾಲೆಗಳಲ್ಲಿ 74 ಶಾಲೆಗಳನ್ನು ನ. 30ರೊಳಗಾಗಿ ಹಾಗೂ ಉಳಿದ 15 ಶಾಲೆಗಳನ್ನು ಡಿ. 15ರೊಳಗಾಗಿ ಆರಂಭಿಸಲು ಅನುಮತಿ ನೀಡಲಾಗುವುದು. ಅದಕ್ಕಾಗಿ ಡಿ. 4ರಂದು ಬೆಳಗ್ಗೆ ಶಂಕುಸ್ಥಾಪನೆ ನಡೆಸಲಾಗುವುದು. ಮಹಾನಗರಪಾಲಿಕೆ ವ್ಯಾಪ್ತಿಯ 47ಶಾಲೆಗಳಲ್ಲಿ ನಿರ್ಮಿಸಲಾಗುವ ಶೌಚಾಲಯಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯ 35 ವಾರ್ಡುಗಳಲ್ಲಿ ಅಮೃತ ಮತ್ತು ಸ್ಮಾರ್ಟ್‌ಸಿಟಿ ಯೋಜನೆಗಳಲ್ಲಿ ಕೈಗೊಳ್ಳಲಾಗುವ ಉದ್ಯಾನವನಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಉದ್ಯಾನವನಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಶಿವಮೊಗ್ಗ ಸಮೀಪದ ಗೋವಿಂದಾಪುರದಲ್ಲಿನ ಆಶ್ರಯ ಕಾಲೋನಿ ಹಾಗೂ ಅಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಿಗೆ ಸಿಮೆಂಟ್‌ ರಸ್ತೆ ನಿರ್ಮಿಸಲು ಡಿ. 1ರೊಳಗಾಗಿ ಗುತ್ತಿಗೆದಾರರಿಗೆ ಆದೇಶ ನೀಡುವಂತೆ ಸೂಚಿಸಿದರು.

ಸ್ಮಾರ್ಟ್‌ಸಿಟಿ ಯೋಜನೆಯಡಿ ಅನೇಕ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಅವುಗಳ ನಿರ್ವಹಣೆ ಮತ್ತು ಮೇಲುಸ್ತುವಾರಿಗಾಗಿ ಕೊರತೆ ಇರುವ ಸಿಬ್ಬಂದಿಗಳ ತಾತ್ಕಾಲಿಕ ಅವಧಿಗೆ ನೇಮಿಸಿಕೊಳ್ಳಲು ಸೂಚಿಸಲಾಗಿದೆ. ನಗರದ ಹಲವೆಡೆ ಕೈಗೊಂಡ ಕಾಮಗಾರಿಗಳು ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ನಗರದ ಎಲ್ಲಾ ವಾರ್ಡುಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗುವುದು.

ಮರುದಿನ ಬೆಳಗ್ಗೆ ಈ ಭೇಟಿಯ ನಂತರ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದರು. ನಗರದ ವ್ಯಾಪ್ತಿಯಲ್ಲಿ ಕೈಗೊಂಡ ಯು.ಜಿ.ಡಿ. ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಡಿ. 4ರೊಳಗಾಗಿ ಯಾವುದೇ ಒಂದು ವಾರ್ಡನ್ನಾದರೂ ಪೂರ್ಣಗೊಳಿಸಿ ವರದಿ ನೀಡುವಂತೆ ಅವರು ಲೋಕೋಪಯೋಗಿ ಇಲಾಖೆಯ ಅಭಿಯಂತರರಿಗೆ ಸೂಚಿಸಿದರು.

ಶಿವಮೊಗ್ಗ ಮಹಾನಗರಪಾಲಿಕೆಯ ವತಿಯಿಂದ ನಗರಾಭಿವೃದ್ಧಿಗಾಗಿ ಕೈಗೊಂಡಿರುವ ಯೋಜನೆಗಳು ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳ ಕುರಿತು ಸಂಬಂಧಿತ ಇಲಾಖೆಗಳ ಸಮಸ್ಯೆ-ಸವಾಲುಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಲು ಬೆಂಗಳೂರಿನಲ್ಲಿ ಸದ್ಯದಲ್ಲಿ ಸಭೆ ಕರೆಯಲಾಗುವುದು ಎಂದರು.

ರಾಜ್ಯ ಸರ್ಕಾರವು ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮಳೆಯಿಂದ ಹಾನಿಗೊಳಗಾದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತಲಾ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ. ಈ ಕ್ಷೇತ್ರಗಳಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಶಾಸಕರಾದ ರುದ್ರೇಗೌಡ, ಆರ್‌. ಪ್ರಸನ್ನಕುಮಾರ್‌, ಕೆ.ಬಿ. ಅಶೋಕ ನಾಯ್ಕ, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌, ಅಪರ  ಜಿಲ್ಲಾಧಿಕಾರಿ ಜಿ.ಅನುರಾಧ, ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ಎಸ್‌. ವಟಾರೆ, ಪಾಲಿಕೆಯ ಉಪಮಹಾಪೌರ ಚನ್ನಬಸಪ್ಪ ಮತ್ತಿತರರು ಇದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ