ಸಮರ್ಪಕ ಬರ ಪರಿಹಾರ ಕಾರ್ಯ ಕೈಗೊಳ್ಳಿ

ಬೆಳೆ ಹಾನಿಯಾಗಿರುವ ರೈತರಿಗೆ ಸೂಕ್ತ ಪರಿಹಾರ•ಜಾನುವಾರುಗಳಿಗೆ ಮೇವು ಒದಗಿಸಲು ಸೂಚನೆ

Team Udayavani, May 16, 2019, 12:28 PM IST

ಯಾದಗಿರಿ: ಬರ ಪರಿಹಾರ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ನೇತೃತ್ವದಲ್ಲಿ ಬುಧವಾರ ನಡೆಯಿತು.

ಯಾದಗಿರಿ: ಜಿಲ್ಲೆಯಲ್ಲಿ ಬರ ಆವರಿಸಿರುವ ಹಿನ್ನೆಲೆಯಲ್ಲಿ ಸಮರ್ಪಕ ಬರ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಟಿ.ಕೆ. ಅನಿಲಕುಮಾರ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಬರ ಪರಿಹಾರ ಕುರಿತ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಳೆ ಹಾನಿಯಾಗಿರುವ ರೈತರಿಗೆ ಸೂಕ್ತ ಪರಿಹಾರ ನೀಡಲು ಕ್ರಮ ವಹಿಸಬೇಕು. ಜನತೆಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶಿಸಿದರು.

ಬರ ಪರಿಹಾರ ಸಂಬಂಧ ರೈತರ ಆಧಾರ್‌ ಕಾರ್ಡ್‌ ಮತ್ತು ಬ್ಯಾಂಕ್‌ ಖಾತೆ ವಿವರವನ್ನು ಆನ್‌ಲೈನ್‌ನಲ್ಲಿ ನಮೂದಿಸಬೇಕು ಎಂದು ಸೂಚಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಕೊಂಕಲ್ ಹೋಬಳಿಯ ದೇವನಹಳ್ಳಿ ಗ್ರಾಮದಲ್ಲಿ ಒಟ್ಟು ನಿಗದಿತ ಗುರಿ 126 ಇತ್ತು. ಆದರೆ ಕೇವಲ ಒಬ್ಬ ರೈತರ ಡಾಟಾ ನಮೂದು ಮಾಡಲಾಗಿದೆ. ಈ ಬಗ್ಗೆ ಗ್ರಾಮ ಲೆಕ್ಕಾಧಿಕಾರಿಗಳು ಖುದ್ದಾಗಿ ರೈತರ ಮನೆ ಬಾಗಿಲಿಗೆ ತೆರಳಿ ಅವರ ವಿವರಗಳನ್ನು ಆನ್‌ಲೈನ್‌ನಲ್ಲಿ ನಮೂದಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ಹುಣಸಗಿ ಹೋಬಳಿಯ ಅಗ್ನಿ ಗ್ರಾಮದಲ್ಲೂ ಸರಿಯಾಗಿ ಡಾಟಾ ನಮೂದು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾಧಿಕಾರಿ ಎಂ. ಕೂರ್ಮಾರಾವ್‌ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಪೂರ್ವದಲ್ಲಿ ಕಳೆದ ಮಾರ್ಚ್‌ 1ರಿಂದ ಇದುವರೆಗೆ ಜಿಲ್ಲೆಯಲ್ಲಿ ಶೇ. 46ರಷ್ಟು ಮಳೆ ಕೊರತೆಯಾಗಿದೆ. ಏಪ್ರಿಲ್ನಲ್ಲಿ ಮಾತ್ರ ಸ್ವಲ್ಪ ಮಳೆ ಸುರಿದಿದೆ. ಶಹಾಪುರ ತಾಲೂಕಿನಲ್ಲಿ ಶೇ. 60ರಷ್ಟು ಮಳೆ ಕೊರತೆ ಉಂಟಾಗಿದೆ ಎಂದು ತಿಳಿಸಿದರು.

2017ರ ಮುಂಗಾರಿನಲ್ಲಿ 234 ರೈತರಿಗೆ 34 ಲಕ್ಷ ರೂ. ಬೆಳೆವಿಮೆ ಪರಿಹಾರ ಬಂದಿದೆ. 2018ರ ಹಿಂಗಾರಿನಲ್ಲಿ 2,823 ರೈತರು ಮತ್ತು ಮುಂಗಾರಿನಲ್ಲಿ 27,551 ರೈತರು ನೋಂದಾಯಿಸಿದ್ದಾರೆ. ಇವರಿಗೆ ವಿಮೆ ಪರಿಹಾರ ಬರದ ಕಾರಣ ಬಾಕಿ ಇರುತ್ತದೆ. ಯಾದಗಿರಿ ಮತ್ತು ಸುರಪುರ ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. 2018ನೇ ಸಾಲಿನ ಮುಂಗಾರು ಬೆಳೆಗಳಿಗೆ ಸಂಬಂಧಿಸಿದಂತೆ ಒಟ್ಟು 1,37,067 ಹೆಕ್ಟೆರ್‌ ಬೆಳೆಹಾನಿಯಾಗಿರುವುದಾಗಿ ಅಂದಾಜಿಸಲಾಗಿದೆ. ಇದಕ್ಕೆ 9907 ಲಕ್ಷ ರೂ.ಗಳ ಪರಿಹಾರ ಮಂಜೂರಿಗಾಗಿ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅದೇ ರೀತಿ ಹಿಂಗಾರು ಬೆಳೆಗಳಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಒಟ್ಟು 29,098 ಹೆಕ್ಟೇರ್‌ ಬೆಳೆ ಹಾನಿಯಾಗಿರುವುದಾಗಿ ಅಂದಾಜಿಸಲಾಗಿದೆ. ಬೆಳೆ ಪರಿಹಾರಕ್ಕೆ ಒಟ್ಟು 2,530 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರಿಗಾಗಿ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ವಿವರಿಸಿದರು.

ಜಿಲ್ಲೆಯಲ್ಲಿ 2018-19ನೇ ಸಾಲಿನಲ್ಲಿ ಒಟ್ಟು 48 ರೈತರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳು ವರದಿಯಾಗಿದ್ದು, ಈ ಪೈಕಿ 30 ಪ್ರಕರಣಗಳನ್ನು ಒಪ್ಪಿ ಕುಟುಂಬಗಳಿಗೆ ಪರಿಹಾರದ ಚೆಕ್‌ ವಿತರಿಸಲಾಗಿದೆ. 7 ಪ್ರಕರಣ ತಿರಸ್ಕೃತವಾಗಿದ್ದು, 11 ರೈತರ ಪ್ರಕರಣಗಳನ್ನು ಎಫ್‌ಎಸ್‌ಎಲ್ ವರದಿಗಾಗಿ ಕಳುಹಿಸಲಾಗಿದ್ದು, ವರದಿ ಬಂದ ನಂತರ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕವಿತಾ ಎಸ್‌. ಮನ್ನಿಕೇರಿ ಮಾತನಾಡಿ, 2018-19ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ 25 ಲಕ್ಷ ಮಾನವ ದಿನಗಳ ಗುರಿ ನೀಡಲಾಗಿದೆ. ಪ್ರಸಕ್ತ ಪ್ರತಿದಿನಕ್ಕೆ 8 ಸಾವಿರ ಮಾನವ ದಿನಗಳನ್ನು ತಲುಪಲಾಗುತ್ತಿದ್ದು, ದಿನಕ್ಕೆ 10 ಸಾವಿರ ಮಾನವದಿನಗಳು ಪೂರೈಸಿದರೆ ನಿಗದಿತ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಯಾದಗಿರಿ ಮತ್ತು ಗುರುಮಠಕಲ್ ವ್ಯಾಪ್ತಿಯಲ್ಲಿ ನೀರಾವರಿ ಪ್ರದೇಶ ಕಡಿಮೆ ಇದೆ. ಹಾಗಾಗಿ, ಇಲ್ಲಿ ಯಾವ ರೀತಿ ಮೇವು ಸಂಗ್ರಹ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕ ಡಾ| ಶರಣಭೂಪಾಲರೆಡ್ಡಿ ಮಾತನಾಡಿ, ಜಾನುವಾರುಗಳಿಗೆ ಮೇವಿನ ಅಭಾವ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಾದ್ಯಂತ 7 ಸ್ಥಳಗಳಲ್ಲಿ ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದ್ದು, ಈ ಮೂಲಕ ರೈತರಿಗೆ ಪ್ರತಿ ಕೆ.ಜಿ.ಗೆ 2 ರೂ.ನಂತೆ ವಿತರಿಸಲಾಗುತ್ತಿದೆ ಎಂದು ವಿವರಿಸಿದರು.

ಅಪರ ಜಿಲ್ಲಾಧಿಕಾರಿ ಪ್ರಕಾಶ್‌ ಜಿ.ರಜಪೂತ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ವಸಂತ ವಿ. ಕುಲಕರ್ಣಿ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

19 ಗ್ರಾಮಗಳಿಗೆ ಟ್ಯಾಂಕರ್‌ ನೀರು
ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಮೂರು ತಾಲೂಕುಗಳಲ್ಲಿ ಒಟ್ಟು 19 ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಈ ಗ್ರಾಮಗಳಿಗೆ ತಲಾ 2 ಟ್ರಿಪ್‌ನಂತೆ ಒಟ್ಟು 38 ಟ್ರಿಪ್‌ ನೀರು ಸರಬರಾಜಾಗುತ್ತಿದೆ. ಶಹಾಪುರ ತಾಲೂಕಿನಲ್ಲಿ 3, ಸುರಪುರ ತಾಲೂಕಿನಲ್ಲಿ 8, ಯಾದಗಿರಿ ತಾಲೂಕಿನಲ್ಲಿ 41 ಸೇರಿದಂತೆ ಒಟ್ಟು 52 ಖಾಸಗಿ ಬೋರ್‌ವೆಲ್ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ರಾಜ್‌ಕುಮಾರ್‌ ಪತ್ತಾರ ತಿಳಿಸಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಯಾದಗಿರಿ ನಗರದಲ್ಲಿ 2 ದಿನಗಳಿಗೊಮ್ಮೆ, ಸುರಪುರದಲ್ಲಿ ವಾರದಲ್ಲಿ ಎರಡು ದಿನಕ್ಕೊಮ್ಮೆ, ಗುರುಮಠಕಲ್ 3 ದಿನ, ಶಹಾಪುರ 3 ದಿನ, ಕೆಂಭಾವಿ 3 ದಿನ ಹಾಗೂ ಕಕ್ಕೇರಾದಲ್ಲಿ 2 ದಿನಗಳಿಗೊಮ್ಮೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ.
ಎಂ.ಎಸ್‌. ಅಲ್ಲಾಭಕ್ಷ,
ಜಿಲ್ಲಾ ನಗರಾಭಿವೃದ್ಧಿ ಕೋಶದ ಪ್ರಭಾರ ಯೋಜನಾ ನಿರ್ದೇಶಕ

 

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ