
ಭ್ರಷ್ಟಾಚಾರ ಆರೋಪ: ಬಿಎಸ್‌ವೈ ಸೇರಿ ಮತ್ತಿತರರಿಗೆ ಹೈಕೋರ್ಟ್ ನೋಟಿಸ್
Team Udayavani, Aug 3, 2021, 6:21 PM IST

ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.
ಭ್ರಷ್ಟಾಚಾರದ ಕುರಿತು ತನಿಖೆ ಕೋರಿ ಸಲ್ಲಿಸಿದ್ದ ಖಾಸಗಿ ದೂರನ್ನು ವಜಾಗೊಳಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ ದೂರುದಾರ ಟಿ.ಜೆ. ಅಬ್ರಾಹಂ ಹೈಕೋರ್ಟ್‌ಗೆ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯು ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಅವರ ಪುತ್ರ ಬಿ.ವೈ. ವಿಜಯೇಂದ್ರ, ಆಪ್ತರಾದ ಶಶಿಧರ ಮರಡಿ, ಸಂಜಯಶ್ರೀ, ಚಂದ್ರಕಾಂತ ರಾಮಲಿಂಗಂ, ಮಾಜಿ ಸಚಿವ ಎಸ್.ಟಿ. ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ.ಸಿ. ಪ್ರಕಾಶ್, ಕೆ. ರವಿ, ವಿರೂಪಾಕ್ಷಪ್ಪ ಯಮಕನಮರಡಿ ಅವರಿಗೆ ತುರ್ತು ನೋಟಿಸ್ ಜಾರಿಗೊಳಿಸಿ, ವಿಚಾರಣೆಯನ್ನು ಆಗಸ್ಟ್ ಎರಡನೇ ವಾರಕ್ಕೆ ಮುಂದೂಡಿತು.
ಇದನ್ನೂ ಓದಿ :ವಿರೋಧಿಸಿದ್ದ ಬಿಜೆಪಿಯಿಂದಲೇ ತೈಲ ಬೆಲೆ ಏರಿಕೆ: ಮಹಾದೇವಪ್ಪ
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಮುಖ್ಯಮಂತ್ರಿಯ ಸಾಂವಿಧಾನಿಕ ಹುದ್ದೆಯಲ್ಲಿರುವ ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ಪಡೆದುಕೊಂಡಿಲ್ಲ ಎಂದು ವಿಚಾರಣಾ ನ್ಯಾಯಾಲಯ ದೂರು ಅರ್ಜಿಯನ್ನು ವಜಾಗೊಳಿಸಿತ್ತು. ಆದರೆ, ಈಗ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿಲ್ಲ. ಹಾಗಾಗಿ, ಪೂರ್ವಾನುಮತಿ ಅಗತ್ಯವಿಲ್ಲ ಎಂದು ನ್ಯಾಯಪೀಠಕ್ಕೆ ಮನವರಿಕೆ ಮಾಡಿದರು.
ಪ್ರಕರಣದ ಹಿನ್ನೆಲೆ :
ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹಾಗೂ ಇತರೆ ಆಪ್ತರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ, ಸಿಎಂ ಕುಟುಂಬದವರು ನಕಲಿ ಕಂಪನಿಗಳಲ್ಲಿ ಹೂಡಿಕೆ ಮಾಡಿದ್ದಾರೆ, ಸರ್ಕಾರದ ವಿವಿಧ ಯೋಜನೆಗಳಲ್ಲಿ ಕೋಟ್ಯಂತರ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿದ್ದ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ, ಎಸಿಬಿಗೆ ದೂರು ನೀಡಿದ್ದರು. ಎಸಿಬಿ ಅಧಿಕಾರಿಗಳು ದೂರನ್ನು ಕೈಬಿಟ್ಟಿದ್ದರು. ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಅಬ್ರಾಹಂ ಖಾಸಗಿ ದೂರು ಸಲ್ಲಿಸಿದ್ದರು. ಬಿಎಸ್‌ವೈ ಹಾಗೂ ಇತರರ ವಿರುದ್ಧ ತನಿಖೆಗೆ ಪೂರ್ವಾನುಮತಿ ಪಡೆದಿಲ್ಲ ಎಂದು ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಲಾಗಿದೆ.
ಟಾಪ್ ನ್ಯೂಸ್
