ವರ್ಷಾಂತ್ಯ ಕೆಪಿಸಿಸಿ ಪುನಾರಚನೆ?

ಶೀಘ್ರ ಎಐಸಿಸಿ ಪುನಾರಚನೆ ಮಾಡುವ ಸಾಧ್ಯತೆ

Team Udayavani, Dec 12, 2019, 6:45 AM IST

ಬೆಂಗಳೂರು: ಈ ವರ್ಷಾಂತ್ಯದೊಳಗೆ ಎಐಸಿಸಿ ಪುನಾರಚನೆಯಾಗಲಿದ್ದು, ಆ ವೇಳೆಯಲ್ಲಿಯೇ ರಾಜ್ಯದಲ್ಲಿಯೂ ಕೆಪಿಸಿಸಿ ಪುನಾರಚನೆ ಮಾಡಲು ಸಿದ್ಧತೆ ನಡೆದಿದೆ. ರಾಷ್ಟ್ರಮಟ್ಟದಲ್ಲಿ ಈಗಾಗಲೇ ಹಲವಾರು ಹಿನ್ನಡೆ ಸಾಧಿಸಿರುವ ದೇಶದ ಅತ್ಯಂತ ಹಳೆಯ ಪಕ್ಷವಾಗಿರುವ ಕಾಂಗ್ರೆಸ್‌, ಎಐಸಿಸಿ ಪುನಾರಚನೆ ಮಾಡಿ ಪಕ್ಷ ಸಂಘಟನೆ ಮಾಡಲು ಎಲ್ಲ ತಯಾರಿ ಮಾಡಿಕೊಂಡಿದೆ. ಎಐಸಿಸಿಗೆ ರಾಜ್ಯದಿಂದ ಯಾರು ಹೋಗುತ್ತಾರೆ ಎಂಬುದೇ ಸದ್ಯದ ಕುತೂಹಲದ ಸಂಗತಿಯಾಗಿದೆ.

ಇತ್ತ, ರಾಜ್ಯದಲ್ಲಿ ಲೋಕಸಭೆ ಚುನಾವಣೆ ಬಳಿಕ ಅಧ್ಯಕ್ಷ, ಕಾರ್ಯಾಧ್ಯಕ್ಷರನ್ನು ಹೊರತುಪಡಿಸಿ ವಿಸರ್ಜನೆ ಮಾಡಲಾಗಿದ್ದ ಕೆಪಿಸಿಸಿ ಪುನಾರಚನೆಗೂ ಸಿದ್ಧತೆ ನಡೆದಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್‌, ಎಂ.ಬಿ. ಪಾಟೀಲ್‌, ಎಚ್‌.ಕೆ. ಪಾಟೀಲ್‌, ಡಾ| ಜಿ. ಪರಮೇಶ್ವರ ಮತ್ತು ಸಿದ್ದರಾಮಯ್ಯ ಹೆಸರು ಕೇಳಿಬಂದಿದೆ. ಸಿದ್ದರಾಮಯ್ಯ ಈಗಾಗಲೇ ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರನ್ನು ಮುಂದೆ ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೇಮಕ ಮಾಡುವ ಸಾಧ್ಯತೆಯೂ ಇದೆ. ಆದರೆ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರನ್ನು ವಿಪಕ್ಷ ನಾಯಕನ ಸ್ಥಾನದಲ್ಲಿಯೇ ಮುಂದುವರೆಸುವ ಸಾಧ್ಯತೆ ಹೆಚ್ಚಿದೆ ಎಂದು ಹೇಳಲಾಗುತ್ತಿದೆ.

ಖರ್ಗೆ ಅಧ್ಯಕ್ಷ?
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪ್ರಮುಖವಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಕೇಳಿ ಬರುತ್ತಿದೆ. ಸದ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮಹಾರಾಷ್ಟ್ರ ಉಸ್ತುವಾರಿಯಾಗಿದ್ದಾರೆ. ಒಂದು ವೇಳೆ ಖರ್ಗೆಯವರಿಗೆ ಅಧ್ಯಕ್ಷ ಸ್ಥಾನ ನೀಡಿ, ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕರಾಗಿ ಮುಂದುವರಿಸಿದರೆ, ಎರಡೂ ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಡಾ| ಜಿ. ಪರಮೇಶ್ವರ್‌ ಹಾಗೂ ಹಿರಿಯ ನಾಯಕ ಎಚ್‌.ಕೆ. ಪಾಟೀಲ್‌ ಅವರನ್ನು ಸಿಡಬ್ಲ್ಯುಸಿ (ಕಾಂಗ್ರೆಸ್‌ ವರ್ಕಿಂಗ್‌ ಕಮಿಟಿ)ಗೆ ನೇಮಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಕಾರ್ಯದರ್ಶಿಗಳಾಗಲು ಕಾತುರ
ರಾಜ್ಯ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಇರುವ ಅನೇಕ ನಾಯಕರು ಎಐಸಿಸಿ ಕಾರ್ಯದರ್ಶಿಯಾಗುವ ಬಗ್ಗೆ ಆಸಕ್ತಿ ಹೊಂದಿದ್ದಾರೆ ಎನ್ನಲಾಗುತ್ತಿದೆ. ಪ್ರಮುಖವಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ದಿನೇಶ್‌ ಗುಂಡೂರಾವ್‌ ಅವರಿಗೆ ಸೂಕ್ತ ಸ್ಥಾನ ಕಲ್ಪಿಸಲು ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ನೇಮಿಸಿ ಯಾವುದಾದರೂ ರಾಜ್ಯದ ಉಸ್ತುವಾರಿ ವಹಿಸಬಹುದು ಎನ್ನಲಾಗುತ್ತಿದೆ.

ರಾಹುಲ್‌ ಮರು ಪ್ರವೇಶ?
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಜವಾಬ್ದಾರಿ ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ರಾಹುಲ್‌ ಗಾಂಧಿ ಅವರನ್ನೇ ಮತ್ತೆ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಮರು ನೇಮಕ ಮಾಡುವ ಸಾಧ್ಯತೆ ಇದೆ ಎಂದು ದಿಲ್ಲಿ ಮಟ್ಟದಲ್ಲಿ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಯಾಗುತ್ತಿದೆ. ಒಂದು ವೇಳೆ, ರಾಹುಲ್‌ ಗಾಂಧಿ ಮತ್ತೆ ಅಧ್ಯಕ್ಷ ಸ್ಥಾನಕ್ಕೇರಿದರೆ ರಾಜ್ಯದಿಂದ ಯುವ ಕಾಂಗ್ರೆಸ್‌ ನಾಯಕರಿಗೆ ರಾಷ್ಟ್ರ ರಾಜಕಾರಣದಲ್ಲಿ ಹೆಚ್ಚಿನ ಅವಕಾಶ ದೊರೆಯುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

-  ಶಂಕರ ಪಾಗೋಜಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ