ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಎಚ್.ವಿಶ್ವನಾಥ್
Team Udayavani, Dec 9, 2022, 8:35 PM IST
ಬೆಂಗಳೂರು: ಮಾಜಿ ಸಚಿವ ಬಿಜೆಪಿಯ ಎಚ್.ವಿಶ್ವನಾಥ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ಶುಕ್ರವಾರ ವಿಶ್ವನಾಥ್ ಸಮಾಲೋಚನೆ ನಡೆಸಿದರು.
ವಿಧಾನಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ್ ಉಪಸ್ಥಿತರಿದ್ದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಸಿದ್ದರಾಮಯ್ಯ ಅವರು ವಿಶ್ವನಾಥ್ ಮರಳಿ ಕಾಂಗ್ರೆಸ್ ಸೇರ್ಪಡೆಗೆ ಸಮ್ಮತಿ ಸೂಚಿಸಿದ್ದು ಸಂಕ್ರಾಂತಿ ನಂತರ ವಿಶ್ವನಾಥ್ ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.