Census: ಆಯೋಗ ವರದಿ ಕೊಟ್ಟಾಗ ಜಾತಿ ಗಣತಿ ವರದಿ ಸ್ವೀಕಾರ: ಸಿಎಂ ಸಿದ್ದರಾಮಯ್ಯ
Team Udayavani, Oct 29, 2023, 8:57 PM IST
ಬೆಂಗಳೂರು: ರಾಜ್ಯದ ಎಲ್ಲಾ ವರ್ಗಗಳ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆ (ಜಾತಿ ಗಣತಿ)ಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ ಸರ್ಕಾರಕ್ಕೆ ಸಲ್ಲಿಸಿದಾಗ ಅದನ್ನು ಸ್ವೀಕರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಳಿದಾಸ ಹೆಲ್ತ್ ಆ್ಯಂಡ್ ಎಜುಕೇಷನ್ ಟ್ರಸ್ಟ್ ಮತ್ತು ಅಹಿಲ್ಯಾ ಫೌಂಡೇಷನ್ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ಜಾತಿ ಗಣತಿ ವರದಿ ಸ್ವೀಕಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.
ನನ್ನ ಅವಧಿಯಲ್ಲಿ ನಡೆದ ಜಾತಿ ಸಮೀಕ್ಷೆ ಸಂದರ್ಭದಲ್ಲಿ ಕಾಂತರಾಜು ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದರು. ಅವರು ವರದಿ ಸಲ್ಲಿಸಿದಾಗ ಅಂದಿನ ಮುಖ್ಯಮಂತ್ರಿ ಎಚ್.ಡಿ .ಕುಮಾರಸ್ವಾಮಿ, ನಂತರ ಬಂದ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರಾಗಲಿ ವರದಿ ಪಡೆಯಲಿಲ್ಲ. ಈಗ ಜಯಪ್ರಕಾಶ್ ಹೆಗ್ಡೆ ಆಯೋಗದ ಅಧ್ಯಕ್ಷರಾಗಿದ್ದು ಅವರು ವರದಿಯನ್ನು ನವೆಂಬರ್ ಅಥವಾ ಡಿಸೆಂಬರ್ನಲ್ಲಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಅವರು ಕೊಟ್ಟಾಗ ಸ್ವೀಕರಿಸಲಾಗುವುದು ಎಂದರು.
ಬದಲಾವಣೆ ವರಿಷ್ಠರು ತೀರ್ಮಾನಿಸುತ್ತಾರೆ
ಸಚಿವರ ಬದಲಾವಣೆಯ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಮೂವತ್ತು ತಿಂಗಳ ನಂತರ ಸಚಿವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡುವ ಬಗ್ಗೆ ಶಾಸಕರು ಪ್ರಸ್ತಾಪಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಂತ ಎಲ್ಲಾ ಶಾಸಕರು ಹೇಳಿದ್ದಾರೆಯೇ? ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದರು.