
ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಬಿಲ್ಲವ ಸಮುದಾಯಕ್ಕೆ ಅನ್ಯಾಯ: ಪ್ರಣವಾನಂದ ಸ್ವಾಮೀಜಿ
Team Udayavani, Mar 26, 2023, 2:03 PM IST

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯಲ್ಲಿ ಜಿಲ್ಲೆಯ ಬಿಲ್ಲವ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಬಿಲ್ಲವರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಇತರ ಸಮುದಾಯದವರಿಗೆ ಅವಕಾಶ ನೀಡಲಾಗಿದೆ. ಈ ಅನ್ಯಾಯನವನ್ನು ಸಹಿಸಲು ಸಾಧ್ಯವಿಲ್ಲ ಎಂದು ಕಲಬುರಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಪ್ರಣವಾನಂದ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂದಿನ ಪಟ್ಟಿ ಬಿಡುಗಡೆ ವೇಳೆ ತಪ್ಪನ್ನು ಸರಿಪಡಿಸದಿದ್ದರೆ ಪಕ್ಷಕ್ಕೆ ದೊಡ್ಡ ಹೊಡೆತ ಬೀಳಬಹುದು. ಈಗಾಗಲೇ ಬಂಟ್ವಾಳ ಕ್ಷೇತ್ರದಲ್ಲಿ ಪಕ್ಷೇತರರಾಗಿ ಸ್ಪರ್ಧಿಸಲು ಸಮುದಾಯದ ಒಂದಿಬ್ಬರು ಮುಂದೆ ಬಂದಿದ್ದಾರೆ. 2 ಲಕ್ಷ ರೂ. ಪಾವತಿಸಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರನ್ನೂ ಕಡೆಗಣಿಸಲಾಗಿದೆ. ಈ ವಿಚಾರಗಳ ಕುರಿತು ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಾಗಿದ್ದು, ನಮ್ಮ ಬೇಡಿಕೆಯನ್ನು ಮತ್ತೊಮ್ಮೆ ಸ್ಪಷ್ಟಪಡಿಸಲಾಗಿದೆ.
ಇದು ಬಿಜೆಪಿಯವರಿಗೂ ಎಚ್ಚರಿಕೆಯಾಗಿದ್ದು, ಬಿಲ್ಲವ ಸಮುದಾಯದ ಜನಸಂಖ್ಯೆ ಮತ್ತು ಮತಗಳ ಲೆಕ್ಕದಲ್ಲಿ ಅವಕಾಶ ನೀಡಬೇಕು. ಇಲ್ಲವಾದಲ್ಲಿ ಮತ್ತೆ ಪಾದಯಾತ್ರೆ ಕೈಗೊಂಡು ಸಮುದಾಯವನ್ನು ಜಾಗೃತಿ ಮೂಡಿಸಲಾಗುವುದು. ಸರಕಾರ ನಾರಾಯಣ ಗುರು ಅಭಿವೃದ್ಧಿ ನಿಗಮ ರಚನೆ ಮಾಡಿದ್ದರೂ, ಅದಕ್ಕೆ ಹಣ ಇಟ್ಟಿಲ್ಲ, ಇದು ಕೂಡಾ ಅವರಿಗೆ ಮುಳುವಾಗುವ ಸಾಧ್ಯತೆಯಿದೆ. ಕಾಂಗ್ರೆಸ್‌ನಲ್ಲಿ ಬಿ.ಕೆ. ಹರಿಪ್ರಸಾದ್‌ರಂತಹ ಬಿಲ್ಲವ ನಾಯಕರು ಹೈಕಮಾಂಡ್‌ಗೆ ಒತ್ತಡ ತರಬೇಕು ಎಂದವರು ಆಗ್ರಹಿಸಿದ್ದಾರೆ.
ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ.ಸುವರ್ಣ, ಪ್ರಧಾನ ಕಾರ್ಯದರ್ಶಿ ಲೋಕನಾಥ ಪೂಜಾರಿ, ಉಪಾಧ್ಯಕ್ಷ ಸುರೇಶ್ಚಂದ್ರ ಕೋಟ್ಯಾನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
