ಬಿತ್ತನೆ ಬೀಜ, ಗೊಬ್ಬರ ಅಭಾವ ತಡೆಗಟ್ಟಿ

Team Udayavani, Jun 13, 2019, 3:08 AM IST

ಬೆಂಗಳೂರು: ರಾಜ್ಯದ ರೈತರಿಗೆ ಮುಂಗಾರು ಬಿತ್ತನೆಗೆ ಬೀಜ ಹಾಗೂ ಗೊಬ್ಬರದ ಅಭಾವ ಆಗದಂತೆ ನೋಡಿಕೊಳ್ಳಿ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಅವರು, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಸೇರಿದಂತೆ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಹಿಂದಿನ ಸರ್ಕಾರಗಳು ಉಳಿಸಿಕೊಂಡಂತೆ ನಮ್ಮ ಸರ್ಕಾರದಲ್ಲಿ ಕಡತಗಳು ಉಳಿದಿಲ್ಲ. ಬರಗಾರ ನಿರ್ವಹಣೆ ಸಂಬಂಧ ಸಚಿವರು ಸಭೆಗಳನ್ನು ನಡೆಸಿದ್ದಾರೆ. ಚುನಾವಣೆ ಹಿನ್ನೆಲೆ ಇದ್ದರೂ ಬರಗಾರ ನಿರ್ವಹಣೆ ಸಮರ್ಥವಾಗಿ ಮಾಡಿದ್ದೀರಿ ಎಂದು ಮೆಚ್ಚುಗೆ ಸೂಚಿಸಿದರು.

ಐದಾರು ತಿಂಗಳಿನಿಂದ ಮೇವಿನ ಕೊರತೆ, ಕುಡಿಯುವ ನೀರಿನ ಸಮಸ್ಯೆ ಕಾಣುತ್ತಿದ್ದೇವೆ. ಟ್ಯಾಂಕರ್‌ನಲ್ಲಿ ನೀರು ಕೊಡಿಸುವ ಕೆಲಸ, ಖಾಸಗಿ ಬೋರ್‌ವೆಲ್‌ ಮೂಲಕ ಸರಬರಾಜು ಮಾಡುವ ಕೆಲಸ ಮಾಡಿದ್ದೇವೆ. ಆದರೂ ವಿರೋಧ ಪಕ್ಷಗಳು ಪ್ರಚಾರಕ್ಕಾಗಿ ಟೀಕೆ ಮಾಡುತ್ತಿವೆ ಎಂದು ಆರೋಪಿಸಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ, ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಕೃಷಿ ಸಚಿವ ಶಿವಶಂಕರ ರೆಡ್ಡಿ, ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ, ಗ್ರಾಮೀಣಾಭಿವೃದ್ದಿ ಪಂಚಾಯತ್‌ ರಾಜ್‌ ಸಚಿವ ಕೃಷ್ಣ ಬೈರೇಗೌಡ, ಕೈಗಾರಿಕೆ ಸಚಿವ ಕೆ.ಜೆ.ಜಾರ್ಜ್‌, ವಸತಿ ಸಚಿವ ಎಂ.ಟಿ.ಬಿ.ನಾಗರಾಜ್‌, ಆರೋಗ್ಯ ಸಚಿವ ಶಿವಾನಂದ ಪಾಟೀಲ್‌, ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್‌, ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್‌, ಆಹಾರ ಸಚಿವ ಜಮೀರ್‌ ಅಹಮದ್‌, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಉಪಸ್ಥಿತರಿದ್ದರು.

ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಿ: ಕೇಂದ್ರ ಸರ್ಕಾರವು 2018ರ ಮುಂಗಾರು ಹಂಗಾಮಿಗೆ 949 ಕೋಟಿ ರೂ.ಪರಿಹಾರ ಬಿಡುಗಡೆ ಮಾಡಿದ್ದು ಈವರೆಗೆ 651 ಕೋಟಿ ರೂ.ಇನ್‌ಪುಟ್‌ ಸಬ್ಸಿಡಿ ಪಾವತಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು. ಇನ್ನು ನಾಲ್ಕೈದು ದಿನಗಳಲ್ಲಿ ಬಾಕಿ ಮೊತ್ತ ಪಾವತಿಗೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸೂಚಿಸಿದರು.

ಸರ್ಕಾರಿ ಶಾಲೆ, ಆಟದ ಮೈದಾನ, ಸ್ಮಶಾನ ಮತ್ತಿತರ ಸೌಲಭ್ಯ ಕಲ್ಪಿಸಲು ಮುಂದಿನ ಹತ್ತು ವರ್ಷಕ್ಕೆ ಅಗತ್ಯವಿರುವ ಜಮೀನನ್ನು ಈಗಲೇ ಗುರುತಿಸಿ, ಸ್ವಾಧೀನಕ್ಕೆ ಆದೇಶ ಹೊರಡಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಭೆಯಲ್ಲಿ ಸೂಚನೆ ನೀಡಿದರು. ಕೈಗಾರಿಕೆಗಳಿಗೆ ಭೂ ಪರಿವರ್ತನೆ ಮಾಡಿಕೊಡುವ ವಿಚಾರದಲ್ಲಿ ಅರ್ಜಿದಾರರಿಗೆ ಕಿರುಕುಳ ನೀಡಬೇಡಿ ಎಂದು ತಿಳಿಸಿದರು.

ಅಧಿಕಾರಿಗಳಿಗೆ ಸಿಎಂ ಸೂಚನೆ
– ಜಿಲ್ಲಾಧಿಕಾರಿಗಳು ಜನಸ್ನೇಹಿಯಾಗಿ ಕೆಲಸ ಮಾಡಬೇಕು. ಮಾನವೀಯತೆಯಿಂದ ಜನರ ಸಮಸ್ಯೆಗೆ ಸ್ಪಂದಿಸಬೇಕು. ತಾಲೂಕು ಕಚೇರಿಗಳಲ್ಲಿ ಜನಸಾಮಾನ್ಯರ ಕೆಲಸಗಳಿಗೆ ಅಲೆದಾಡುವ ಸ್ಥಿತಿ ಇರಬಾರದು. ಪೋಡಿ ಸೇರಿದಂತೆ ಇನ್ನಿತರ ಕೆಲಸ ಕಾರ್ಯಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡಬೇಕು.

– ಹೋಬಳಿ ಮಟ್ಟದಲ್ಲಿ ಕಡ್ಡಾಯವಾಗಿ ಕಂದಾಯ ಅದಾಲತ್‌, ಪಿಂಚಣಿ ಅದಾಲತ್‌ ನಡೆಸಬೇಕು. ಹಿರಿಯ ನಾಗರಿಕರಿಗೆ ಮನೆ ಸಮೀಕ್ಷೆ ನಡೆಸಿ ವೃದ್ಧಾಪ್ಯ ವೇತನ ನೀಡುವ ಕಾರ್ಯ ಮಾಡಬೇಕು.

– ಸತತ ಬರಗಾಲದಿಂದ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ಜಲ ಸಂರಕ್ಷಣೆಗೆ ಆಂದೋಲನ ಮಾದರಿ ಕಾರ್ಯಕ್ರಮ ರೂಪಿಸಬೇಕು.

– ಮಳೆ ನೀರು ಸಂಗ್ರಹಣೆಗೆ ಆದ್ಯತೆ ನೀಡಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೊಳವೆ ಬಾವಿ ಕೊರೆಯುವುದು ಕಟ್ಟ ಕಡೆಯ ಆಯ್ಕೆಯಾಗಬೇಕು.

– ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಆಸ್ತಿಗಳ ಆವರಣದಲ್ಲಿ ಗಿಡ ನೆಡಲು ಕ್ರಮ ಕೈಗೊಳ್ಲಬೇಕು.

– ಜಲಾಮೃತ ಯೋಜನೆಯಡಿ ರೈತರ ಸಹಭಾಗಿತ್ವದಲ್ಲಿ ಕೆರೆಗಳ ಹೂಳೆತ್ತಲು ಯಂತ್ರದ ವೆಚ್ಚ ಭರಿಸಲು ಅವಕಾಶವಿದೆ. ಇದಕ್ಕಾಗಿ 100 ಕೋಟಿ ರೂ.ಗಳ ಆನುದಾನ ಲಭ್ಯವಿದ್ದು ರೈತರೇ ಹೂಳು ತೆಗೆದುಕೊಂಡು ಹೋಗಬಹುದು. ಈ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸಿ ಸಲ್ಲಿಸಿ.

– ಎಸ್‌ಡಿಆರ್‌ಎಫ್ ಮಾರ್ಗಸೂಚಿಗಳಲ್ಲಿ ಹಲವು ನಿಬಂಧನೆಗಳನ್ನು ಸಡಿಲಗೊಳಿಸಲಾಗಿದ್ದು, ಅನುಮೋದನೆಯಾಗಿರುವ ಕಾಮಗಾರಿಗಳನ್ನು ಬೇಗ ಪೂರ್ಣಗೊಳಿಸಿ.

– ಟ್ಯಾಂಕರ್‌ನಿಂದ ನೀರು ಪೂರೈಕೆ ಬಿಲ್ಲುಗಳನ್ನು ಹದಿನೈದು ದಿನಗಳಲ್ಲಿ ಪಾವತಿಸಬೇಕು. ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಕೆ ಕಡ್ಡಾಯ, ಇದನ್ನು ಪಾಲಿಸಬೇಕು.

ನನ್ನ ಗ್ರಾಮ ವಾಸ್ತವ್ಯಕ್ಕೆ ಹಲವು ಟೀಕೆ ಟಿಪ್ಪಣಿಗಳು ಬರುತ್ತಿವೆ. ಆದರೆ, ನಾನು ಅದಕ್ಕೆ ತಲೆಕೆಡಿಸಿಕೊಳ್ಳುವುದಿಲ್ಲ. ಜನರ ಮಧ್ಯೆ ಕೆಲಸ ಮಾಡಲು ಗ್ರಾಮ ವಾಸ್ತವ್ಯ ಮಾಡುತ್ತಿದ್ದೇನೆ. ಗ್ರಾಮ ವಾಸ್ತವ್ಯ ಮಾಡುವ ವೇಳೆ ಜನರ ಸಮಸ್ಯೆಗಳು ನಿವಾರಣೆ ಆಗಬೇಕು. ಇದಕ್ಕೆ ಅಧಿಕಾರಿಗಳು ಸಹಕರಿಸಬೇಕು.
-ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ

Disclaimer:The views expressed in comments section published on Udayavani.com are those of comment writers alone. They do not represent the views or opinions of Udayavani.com, its staff or The Manipal Group, or any entity associated with The Manipal Group. Udayavani.com reserves rights to remove a comment or all the comments any time.

To report any comment you can email us at udayavani.response@manipalgroup.info. We will review the request and delete the comments.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ