ರಾಜ್ಯ ಸರ್ಕಾರದ ಆಡಳಿತ ಯಂತ್ರ ಚುರುಕುಗೊಳಿಸಲು ಕ್ರಮ

Team Udayavani, Dec 14, 2019, 3:10 AM IST

ಬೆಂಗಳೂರು: ಸರ್ಕಾರದ ಆಡಳಿತ ಯಂತ್ರವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ವಿಧಾನಸೌಧದಲ್ಲಿ ಸರ್ಕಾರದ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳ ಸಭೆ ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು. ಪ್ರವಾಹ ಪರಿಹಾರ ಕಾರ್ಯ ಮತ್ತು ಇತರ ಅಭಿವೃದ್ಧಿ ವಿಷಯಗಳು, ಆಡಳಿತಾತ್ಮಕ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ.ಬಿಡುಗಡೆ ಆಗಿದ್ದರೂ, ಬಹುಪಾಲು ಸಂತ್ರಸ್ತರು ಮನೆ ನಿರ್ಮಿಸಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದರು. ಈವರೆಗೆ 5.06 ಲಕ್ಷ ರೈತರಿಗೆ 785.94 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ.

ಸುಮಾರು 37 ಸಾವಿರ ರೈತರ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗಿರದ ಕಾರಣ ಪರಿಹಾರ ಪಾವತಿಗೆ ಅಡಚಣೆ ಯಾಗಿದೆ. ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಿ ವಾರದೊಳಗೆ ಪರಿಹಾರ ಪಾವತಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ಹೇಳಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆ ಗಳಿಗೆ ಜಮೆ ಆದ ಇನ್ಪುಟ್‌ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರ ಮೊತ್ತಗಳನ್ನು ಸಾಲ ಖಾತೆಗೆ ಜಮಾ ಮಾಡಲಾಗುತ್ತಿದೆ.

ಈ ಬಗ್ಗೆ ಸಾಲಕ್ಕೆ ಜಮಾ ಮಾಡಿ ಕೊಳ್ಳದಂತೆ ಸೂಚಿಸಲಾಗಿದೆ. ಮತ್ತೂಮ್ಮೆ ಈ ಬಗ್ಗೆ ಲಿಖೀತ ಸೂಚನೆ ಕಳುಹಿಸುವಂತೆ ಮುಖ್ಯ ಕಾರ್ಯ ದರ್ಶಿಗಳಿಗೆ ಸೂಚಿಸಲಾಗಿದೆ ಎಂದರು. ಸಕಾಲ ಯೋಜನೆಯಡಿ ಕಡತ ವಿಲೇವಾರಿ ತ್ವರಿತವಾಗಿ ಆಗಬೇಕು. ಜೊತೆಗೆ ಇತರ ಕಡತಗಳನ್ನೂ ವಾರಕ್ಕಿಂತ ಹೆಚ್ಚಿನ ಅವಧಿಗೆ ಬಾಕಿ ಉಳಿಸಬಾರದು. ಎಲ್ಲ ಇಲಾಖೆಗಳಲ್ಲಿ ಇ-ಆಫೀಸ್‌ ವ್ಯವಸ್ಥೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದೆ.

ಮೂಲ ಸೌಕರ್ಯ ಅಭಿವೃದ್ಧಿ ಯೋಜನೆಗಳಿಗೆ ಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಬಗ್ಗೆ ಅರಣ್ಯ ಮತ್ತು ಕಂದಾಯ ಇಲಾಖೆಗಳೊಂದಿಗೆ ಸಭೆ ನಡೆಸಿ ತೊಡಕು ಗಳನ್ನು ನಿವಾರಿಸುವಂತೆ ಮುಖ್ಯ ಕಾರ್ಯ ದರ್ಶಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.

ವರ್ಷಾಂತ್ಯದಲ್ಲಿ 1.5 ಲಕ್ಷ ಮನೆ ನಿರ್ಮಾಣ: ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಈ ವರ್ಷಾಂತ್ಯದಲ್ಲಿ 1.5 ಲಕ್ಷ ಮನೆ ನಿರ್ಮಾಣ ಆಗಿದ್ದು, ಈವರೆಗೆ 1.09 ಲಕ್ಷ ಮನೆ ನಿರ್ಮಾಣವಾಗಿದೆ. ಪ್ರಗತಿಯಲ್ಲಿರುವ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಲಾಗಿದೆ ಎಂದು ಸಿಎಂ ಹೇಳಿದರು.

ಎಸ್ಸಿಪಿ ಟಿಎಸ್ಪಿ ಯೋಜನೆಯಡಿ 30,444 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈ ವರೆಗೆ 11,642 ಕೋಟಿ ರೂ.. ಬಿಡುಗಡೆಯಾಗಿದೆ. 9667 ಕೋಟಿ ರೂ. ವೆಚ್ಚವಾಗಿದೆ. ಮಾರ್ಚ್‌ 15 ರೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಅನುದಾನ ವೆಚ್ಚ ಮಾಡುವಂತೆ ತಿಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್‌ ವೆಚ್ಚ ಮತ್ತು ವಿದ್ಯಾರ್ಥಿ ವೇತನಗಳಿಗೆ ಅನುದಾನವನ್ನು ಬಿಡುಗಡೆ ಮಾಡುವಂತೆ ನಿರ್ದೇಶನ ನೀಡಿದ್ದೇನೆ ಎಂದರು.

8 ಲಕ್ಷ ಕಾರ್ಮಿಕರಿಗೆ ಪಿಂಚಣಿಗೆ ಶಿಫಾರಸು: ಕಾರ್ಮಿಕರ ಪಿಂಚಣಿ ಯೋಜನೆಯಡಿ ಕೇಂದ್ರ ಸರ್ಕಾರವು 7 ಲಕ್ಷ ಗುರಿ ನೀಡಿತ್ತು. ರಾಜ್ಯದ 8 ಲಕ್ಷ ಕಾರ್ಮಿಕರಿಗೆ ಪಿಂಚಣಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗಿದೆ. ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಡಿ ಕಾರ್ಮಿಕರಿಗೆ ಹೆಚ್ಚಿನ ನೆರವು ನೀಡುವ ಬಗ್ಗೆ ಚರ್ಚಿಸಲಾಯಿತು ಎಂದು ಮುಖ್ಯಮಂತ್ರಿ ಹೇಳಿದರು. ಬೆಂಗಳೂರಿನಲ್ಲಿ ಸಂಜೆ ಮತ್ತು ರಾತ್ರಿ ಓಡಾಡುವ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸೂಕ್ತ ಕ್ರಮಕೈಗೊಳ್ಳುವಂತೆ ಸೂಚಿಸಲಾಗಿದ್ದು,

ಸಂಜೆ ಮತ್ತು ರಾತ್ರಿ ವೇಳೆ ಪೋಲೀಸ್‌ ಗಸ್ತು ಹೆಚ್ಚಿಸಲು, ರಾತ್ರಿ ವೇಳೆ ಮಹಿಳಾ ಪೋಲೀಸರು ಸಹ ಗಸ್ತು ತಿರುಗುವ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. ಬೆಂಗಳೂರಿನ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಗಮನ ಹರಿಸಲು ನಿರ್ಧರಿಸಲಾಗಿದ್ದು, ಬೆಂಗಳೂರು ಕೆರೆಗಳ ಅಭಿವೃದ್ಧಿಗೆ ಕೂಡಲೇ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಕಸ ಮುಕ್ತ ನಗರವನ್ನಾಗಿ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ತಿಳಿಸಿದರು.

“ಪ್ರಗತಿ ಪರಿಶೀಲನೆ ನಡೆಸಿ, ವರದಿ ನೀಡಿ’: ಪ್ರವಾಹದ ಸಂದರ್ಭದಲ್ಲಿ ಜಿಲ್ಲಾಡಳಿತಗಳು ಉತ್ತಮವಾಗಿ ಕೆಲಸ ಮಾಡಿವೆ. ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹೆಚ್ಚು ಮನೆಗಳು ಹಾನಿಗೊಳಗಾಗಿವೆ. ರಾಜ್ಯದ ಇತಿಹಾಸದಲ್ಲಿಯೇ ಮನೆ ಕಳೆದುಕೊಂಡವರಿಗೆ 5 ಲಕ್ಷ, ಬೆಳೆ ನಾಶಕ್ಕೆ ಕೇಂದ್ರ ಸರ್ಕಾರ ನೀಡುವ ಹಣಕ್ಕಿಂತ 10 ಸಾವಿರ ರೂ.ಹೆಚ್ಚು ಹಣ ನೀಡಿದ್ದೇವೆ. ರಸ್ತೆ ಹಾಗೂ ಮೂಲ ಸೌಕರ್ಯ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.

5 ಲಕ್ಷ ರೂ.ಪರಿಹಾರ ಎಲ್ಲಿ ಹೋಯಿತು ಎಂದು ಯಡಿಯೂರಪ್ಪ ಪ್ರಶ್ನಿಸಿದರಲ್ಲದೆ, ನಾವು ಎಲ್ಲ ಸರಿ ಮಾಡಿದ್ದೇವೆ ಎಂದರೂ ಜನರಿಗೆ ಸರಿಯಾಗಿ ತಲುಪಿಲ್ಲ ಎಂದು ವರದಿ ಬರುತ್ತಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಎರಡು ಬಾರಿ ಜಿಲ್ಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ, ವಾಸ್ತವ ವರದಿ ನೀಡಬೇಕು. ಮುಖ್ಯಕಾರ್ಯದರ್ಶಿ ಪ್ರತಿ ತಿಂಗಳು ಒಂದು ಜಿಲ್ಲೆಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿ, ವರದಿ ನೀಡುವಂತೆ ಸೂಚಿಸಿದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ