CONNECT WITH US  

15 ಲಕ್ಷ ಉದ್ಯೋಗ, 5 ಲಕ್ಷ ಕೋಟಿ ಹೂಡಿಕೆ

ಬೆಂಗಳೂರು: ನೂತನ ಕೈಗಾರಿಕಾ ನೀತಿ ಅಡಿ 15 ಲಕ್ಷ ಉದ್ಯೋಗ ಸೃಷ್ಟಿ ಮತ್ತು ಐದು ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ಗುರಿ ಹೊಂದಲಾಗಿದೆ ಎಂದು ಸಣ್ಣ ಕೈಗಾರಿಕಾ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ.

ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಜಂಟಿ ನಿರ್ದೇಶಕರು, ವಿವಿಧ ನಿಗಮ, ಮಂಡಳಿಗಳ ವ್ಯವಸ್ಥಾಪಕರು ನಿರ್ದೇಶಕರು ಮತ್ತು ಹಿರಿಯ ಅಧಿಕಾರಿಗಳ ಎರಡು ದಿನದ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯ ಸರ್ಕಾರವು ನೂತನ ಕೈಗಾರಿಕೆ ನೀತಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ 15 ಲಕ್ಷ ಉದ್ಯೋಗ ಸೃಷ್ಟಿ ಮತ್ತು ಐದು ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆಯ ಗುರಿಯನ್ನಿಟ್ಟುಕೊಳ್ಳಲಾಗಿದೆ. ಸರ್ಕಾರದ ಗುರಿ ಸಾಧನೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ರೋಗಗ್ರಸ್ತ ಕೈಗಾರಿಕೆಗಳ ಪುನಶ್ಚೇತನ, ಬೀದರ್‌ನಿಂದ ಚಾಮರಾಜನಗರದವರೆಗೆ ಎಲ್ಲ ಜಿಲ್ಲೆಗಳಿಗೂ ಉದ್ಯಮಗಳ ವಿಸ್ತರಣೆಗೆ ಅಗತ್ಯಕ್ರಮ ಕೈಗೊಳ್ಳಬೇಕಾಗಿದೆ. ಕೈಗಾರಿಕೆಗಳ ಅಭಿವೃದ್ಧಿಗೆ ಮತ್ತು ಹೊಸ ಕೈಗಾರಿಕೆಗಳ ಆರಂಭಿಸಲು ಉತ್ತೇಜನ ನೀಡಲು ಸರ್ಕಾರ ಬದ್ಧವಾಗಿದೆ. ಸರ್ಕಾರದ ಕಾರ್ಯ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಜಿಲ್ಲಾಮಟ್ಟದ ಅಧಿಕಾರಿಗಳು ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರತ್ನ ಪ್ರಭಾ ಮಾತನಾಡಿ, ರಾಜ್ಯದಲ್ಲಿ ಸುಶಿಕ್ಷಿತರ ಸಂಖ್ಯೆ ಹೆಚ್ಚುತ್ತಿದೆ.ಇವರಿಗೆಲ್ಲ ಉದ್ಯೋಗ ಒದಗಿಸುವ ಹೊಣೆ ಸರ್ಕಾರದ ಮೇಲಿದೆ. ಜಿಲ್ಲಾಮಟ್ಟದಲ್ಲಿರುವ ಸಮಸ್ಯೆಗಳನ್ನು ಅಧಿಕಾರಿಗಳು ಆದಷ್ಟು ಬೇಗ ಪರಿಹರಿಸಿ ಜನತೆಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಬೇಕು ಎಂದರು.

ಇದೇ ವೇಳೆ ಜಾರಕಿಹೊಳಿ ನೂತನ ಕೈಗಾರಿಕಾ ಮಾರ್ಗದರ್ಶಿ ನೀತಿಯ ಹೊತ್ತಿಗೆಯನ್ನು ಬಿಡುಗಡೆ ಮಾಡಿದರು. ಸಮಾವೇಶದಲ್ಲಿ ರಾಜ್ಯ ಸಣ್ಣ ಕೈಗಾರಿಕಾಭಿವೃದ್ಧಿ ನಿಗಮದ ಅಧ್ಯಕ್ಷ ಗುರಪ್ಪನಾಯ್ಡು, ಕರ್ನಾಟಕ ಕರಕುಶಲ ನಿಗಮದ ಅಧ್ಯಕ್ಷೆ ವೀಣಾ ಅಚ್ಚಯ್ಯ, ಕೈಗಾರಿಕಾ ಇಲಾಖೆ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ನಿರ್ದೇಶಕ ಗೌರವ್‌ ಗುಪ್ತ ಸೇರಿದಂತೆ ಇತರರು ಉಪಸ್ಥಿತರಿದ್ದರು.

Trending videos

Back to Top