ಸಿಲಿಂಡರ್ ಸ್ಫೋಟ: ಐವರಿಗೆ ಗಾಯ

ಬೆಂಗಳೂರು: ಟೀ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಪೊಲೀಸ್ ಕಾನ್ಸ್ಟೆಬಲ್ಗಳು ಹಾಗೂ ಒಬ್ಬ ಗೃಹ ರಕ್ಷಕ ದಳದ ಸಿಬ್ಬಂದಿ ಗಾಯಗೊಂಡಿರುವ ಘಟನೆ ಮಡಿವಾಳದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಘಟನೆಯಲ್ಲಿ ಮಡಿವಾಳ ಠಾಣೆಯ ಹೊಯ್ಸಳ ಸಿಬ್ಬಂದಿ ನಿಂಗೇಗೌಡ, ಕುಮಾರ್, ಶಿವಶಂಕರ್, ಸಜೀವ್ ಹಾಗೂ ಗೃಹ ರಕ್ಷಕ ದಳ ಸಿಬ್ಬಂದಿ ಶರಣಪ್ಪ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಡಿವಾಳ ಬಿಎಂಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿರುವ ಪೆಟ್ಟಿಗೆ ಅಂಗಡಿಯಲ್ಲಿ ಸೋಮವಾರ ರಾತ್ರಿ 1ಗಂಟೆ ಸುಮಾರಿಗೆ ಇದಕ್ಕಿದ್ದಂತೆ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಪಕ್ಕದಲ್ಲೇ ಇದ್ದ ಆಟೋ ಚಾಲಕರು ಕೂಡಲೇ "ನಮ್ಮ-100'ಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಮಡಿವಾಳ ಠಾಣೆ ಹೊಯ್ಸಳ ಸಿಬ್ಬಂದಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಹೊಯ್ಸಳ ಸಿಬ್ಬಂದಿ ಅಂಗಡಿ ಬಳಿ ಪರಿಶೀಲಿಸಲು ಮುಂದಾದಾಗ ಇದಕ್ಕಿದ್ದಂತೆ ಸಿಲಿಂಡರ್ ಸ್ಫೋಟಗೊಂಡಿದ್ದು, ಅಂಗಡಿ ಸಂಪೂರ್ಣ ಜಖಂಗೊಂಡಿದೆ.
ಈ ವೇಳೆ ನಾಲ್ವರು ಕಾನ್ಸ್ಟೆàಬಲ್ ಹಾಗೂ ಗೃಹ ರಕ್ಷಕ ಸಿಬ್ಬಂದಿ ಗಾಯಗೊಂಡಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಘಟನೆ ಸಂಬಂಧ ಅಂಗಡಿ ಮಾಲೀಕನ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.