ನೂತನ ಮುಖ್ಯ ಕಾರ್ಯದರ್ಶಿಯಾಗಿ ವಿಜಯ್ ಭಾಸ್ಕರ್ ಅಧಿಕಾರ ಸ್ವೀಕಾರ
Team Udayavani, Jun 30, 2018, 5:54 PM IST
ಬೆಂಗಳೂರು:ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಟಿಎಂ ವಿಜಯ್ ಭಾಸ್ಕರ್ ಅವರನ್ನು ನೇಮಕ ಮಾಡಿದ್ದು, ಶನಿವಾರ ಮುಖ್ಯಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಇಂದು ಸೇವೆಯಿಂದ ನಿವೃತ್ತರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಟಿಎಂ. ವಿಜಯ್ ಭಾಸ್ಕರ್ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ನೂತನ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಅವರಿಗೆ ಕೆ.ರತ್ನಪ್ರಭಾ ಅವರು ಅಧಿಕಾರವನ್ನು ಹಸ್ತಾಂತರಿಸಿದರು. ಬಳಿಕ ಮಾತನಾಡಿದ ಅವರು, ನನ್ನ ಕೆಲಸಗಳ ಬಗ್ಗೆ ತೃಪ್ತಿ ಇದೆ ಎಂಬುದಾಗಿ ಹೇಳಿದರು.
ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ 1983ನೇ ಬ್ಯಾಚಿನ ಐಎಎಸ್ ಅಧಿಕಾರಿಯಾಗಿರುವ ವಿಜಯ ಭಾಸ್ಕರ್ರನ್ನು ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ರತ್ನಪ್ರಭಾ ಅವರ ಸೇವಾವಧಿಯನ್ನು ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಅನುಮತಿ ಕೇಳಿತ್ತು. ಆದರೆ, ಕೇಂದ್ರ ಸರಕಾರ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಮುಖ್ಯ ಕಾರ್ಯದರ್ಶಿಯ ಬದಲಾವಣೆ ಮಾಡುವ ನಿರ್ಧಾರ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ.