ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಎಚ್ಚರ | Udayavani - ಉದಯವಾಣಿ
   CONNECT WITH US  
echo "sudina logo";

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಬಗ್ಗೆ ಎಚ್ಚರ

ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್ಚರ ವಹಿಸಲು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೂಚನೆ

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯಬಹುದಾದ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಎಚ್ಚರಿಕೆ ವಹಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಕೊಡಗು ಭಾಗದಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಸಾಧ್ಯತೆಯಿದೆ.

ಆ ಭಾಗದಲ್ಲಿ ನಾವು ಅಭ್ಯರ್ಥಿಗಳ ಆಯ್ಕೆಯಲ್ಲಿ ಎಚ್ಚರ ವಹಿಸಬೇಕು. ಚುನಾವಣಾ ಕಾರ್ಯತಂತ್ರ ಬದಲಿಸಿಕೊಳ್ಳ ಬೇಕೆಂದು ನಿರ್ದೇಶನ ನೀಡಿದ್ದಾರೆ.

ಬಿಜೆಪಿ ಪ್ರಬಲವಾಗಿರುವ ಜಿಲ್ಲೆಗಳಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಕುರಿತು ಆಯಾ ಜಿಲ್ಲಾ ಘಟಕಗಳ ಅಧ್ಯಕ್ಷರಿಗೆ ಅಧಿಕಾರ ನೀಡಿರುವುದರಿಂದ ಬಹು ತೇಕ 9 ರಿಂದ 10 ಜಿಲ್ಲೆಗಳಲ್ಲಿ ಮೈತ್ರಿಗೆ ಸ್ಥಳೀಯ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಬಹುದು.

ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಸ್ಪರ್ಧೆಗೆ ಇಳಿಯುವ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ ತೀವ್ರ ಸ್ಪರ್ಧೆ
ನೀಡಬೇಕು. ಟಿಕೆಟ್‌ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಉಂಟಾಗದಂತೆ ನೋಡಿಕೊಳ್ಳಬೇಕು.

ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದ್ದಾರೆ. ಈ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಲೋಕಸಭೆ ಚುನಾವಣೆಗೆ ಅಡಿಪಾಯ ಹಾಕಿಕೊಳ್ಳಬೇಕಿದೆ. ಹೀಗಾಗಿ, ಸ್ಥಳೀಯವಾಗಿ ಪ್ರಬಲರಾಗಿರುವ, ವರ್ಚಸ್ಸು ಹಾಗೂ ಸಮುದಾಯದ ಬೆಂಬಲ ಇರುವವರಿಗೆ ಟಿಕೆಟ್‌ ನೀಡಿ. ಭಿನ್ನಾಭಿಪ್ರಾಯ ಅಥವಾ ಬಂಡಾಯಕ್ಕೆ ಅವಕಾಶ ಮಾಡಿಕೊಡಬೇಡಿ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Trending videos

Back to Top