CONNECT WITH US  

ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್‌ ಜತೆ ಮೈತ್ರಿಯಿಲ್ಲ

ಮೈಸೂರು: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್‌ ಜತೆಗೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಗೆಲ್ಲುವ ಸಾಮರ್ಥ್ಯವಿರುವ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ನಿಮ್ಮ ನಿಮ್ಮ ನಡುವಿನ ಆಂತರಿಕ ಸಮಸ್ಯೆಗಳನ್ನು ಬದಿಗಿಟ್ಟು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾಂಗ್ರೆಸ್‌ ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.

ನಗರದಲ್ಲಿ ಶನಿವಾರ ಅವರು ಪಕ್ಷದ ಸ್ಥಳೀಯ ಮುಖಂಡರ ಜತೆ ಸಮಾಲೋಚನೆ ನಡೆಸಿದರು. ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಜೆಡಿಎಸ್‌ಗೆ ಬೆಂಬಲ ನೀಡಲಾಗಿದೆ. ಅದೇ ರೀತಿ, ನಗರ ಸ್ಥಳೀಯ ಸಂಸ್ಥೆಗಳಲ್ಲೂ ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದು ನಮ್ಮ ಗುರಿಯಾಗಬೇಕು. ಜತೆಗೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ಅಭ್ಯರ್ಥಿ ಗೆಲುವಿಗೆ ಶ್ರಮಿಸುವ ಮೂಲಕ ರಾಜ್ಯದಲ್ಲಿ ಬಿಜೆಪಿ ನೆಲೆಯೂರದಂತೆ ಮಾಡಬೇಕಿದೆ ಎಂದು ಕರೆ ನೀಡಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್‌ ಜತೆಗಿನ ಮೈತ್ರಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಹೈಕಮಾಂಡ್‌ ತಲೆ ಹಾಕುವುದಿಲ್ಲ. ಇದರ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಕಾಂಗ್ರೆಸ್‌ ಸಮಿತಿಗೆ ವಹಿಸಲಾಗಿದೆ ಎಂದು ಹೇಳಿದರು. ಆದರೆ, ಸಮಾಲೋಚನಾ ಸಭೆಗೆ ಮಾಜಿ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹಾಗೂ ಅವರ ಪುತ್ರ ಸುನಿಲ್‌ ಬೋಸ್‌ ಗೈರು ಹಾಜರಾಗಿದ್ದರು.

Trending videos

Back to Top