CONNECT WITH US  

ಇಂದು ಕುಮಾರಸ್ವಾಮಿ-ರಾಹುಲ್‌ ಭೇಟಿ

ಬೆಂಗಳೂರು:ಕೊಡಗು ಜಿಲ್ಲೆಯಲ್ಲಿ ಉಂಟಾದ ಪ್ರವಾಹಕ್ಕೆ ಸೂಕ್ತ ಪರಿಹಾರ ನೀಡುವಂತೆ ಪ್ರಧಾನಿಗೆ  ಮನವಿ ಸಲ್ಲಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ದೆಹಲಿಗೆ ತೆರಳಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನೂ ಭೇಟಿ ಮಾಡಿ ರಾಜ್ಯದ ಸಮ್ಮಿಶ್ರ ಸರ್ಕಾರದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ.

ರಾಜ್ಯದ ಕೊಡಗು ಸೇರಿದಂತೆ ಕರಾವಳಿ ಭಾಗದಲ್ಲಿ ಅತಿವೃಷ್ಠಿಯಿಂದ ಸುಮಾರು 3 ಸಾವಿರ ಕೋಟಿ ರೂಪಾಯಿ ನಷ್ಟ ಉಂಟಾಗಿದ್ದು, ಮಧ್ಯಂತರ ಪರಿಹಾರವಾಗಿ ಕೇಂದ್ರ ಸರ್ಕಾರ ಕನಿಷ್ಠ 2 ಸಾವಿರ ಕೋಟಿ ರೂ.ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದಾರೆ.

ಇದೇ ವೇಳೆ, ರಾಜ್ಯ ಸರ್ಕಾರ ರೈತರ ಖಾಸಗಿ ಸಾಲ ಮನ್ನಾ ಮಾಡಲು ಋಣ ಮುಕ್ತ ಕಾಯ್ದೆಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಅಂಕಿತ ಹಾಕುವಂತೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನೂ ಭೇಟಿ ಮಾಡಿ ಮನವಿ ಮಾಡಲಿದ್ದಾರೆ.

ನಂತರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿಯನ್ನು ಭೇಟಿ ಮಾಡಿ ಸಮ್ಮಿಶ್ರ ಸರ್ಕಾರಕ್ಕೆ ನೂರು ದಿನ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಿ, ಸದ್ಯ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರದ ಬಗ್ಗೆ ಇರುವ ಗೊಂದಲಗಳು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗಳಿಂದ ಸರ್ಕಾರದ ಮೇಲೆ ಆಗುತ್ತಿರುವ ವ್ಯತಿರಿಕ್ತ ಪರಿಣಾಮಗಳ ಬಗ್ಗೆ ರಾಹುಲ್‌ ಗಾಂಧಿ ಗಮನಕ್ಕೆ ತರುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಇದೇ ವೇಳೆ, ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದ  ಕುರಿತಂತೆಯೂ ಉಪ ಮುಖ್ಯಮಂತ್ರಿ ಪರಮೇಶ್ವರ್‌ ರಾಹುಲ್‌ ಗಾಂಧಿ ಜೊತೆಗೆ ಚರ್ಚಿಸುವ ಸಾಧ್ಯತೆ ಇದೆ.


Trending videos

Back to Top