ಬಿಎಸ್ವೈ, ಬಿಜೆಪಿಯ ಯಾರೂ ಪತ್ರ ಬರೆದಿಲ್ಲ: ಬಿ.ವೈ.ಆರ್
Team Udayavani, Sep 10, 2018, 6:10 AM IST
ಬಾಳೆಹೊನ್ನೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ರಾಷ್ಟ್ರೀಯ ತನಿಖಾ ಸಂಸ್ಥೆಗಳ ಆತ್ಮಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿವೆ ಎಂದು ಮಾಜಿ ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದರು.
ಜಗದ್ಗುರು ರಂಭಾಪುರಿ ಪೀಠಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಆದಾಯ ತೆರಿಗೆ ಹಾಗೂ ಜಾರಿ ನಿರ್ದೇಶನಾಲಯದ ತನಿಖಾ ಸುಳಿಯಲ್ಲಿ ಸಿಲುಕಿದ್ದು, ಇದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅಪಪ್ರಚಾರ ಮಾಡುತ್ತಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಬಿ.ಎಸ್.ಯಡಿಯೂರಪ್ಪ ಅಥವಾ ಬಿಜೆಪಿಯ ಯಾವುದೇ ಮುಖಂಡರೂ ಪತ್ರ ಬರೆದಿಲ್ಲ. ನಕಲಿ ಪತ್ರ ಸೃಷ್ಟಿಸಿ, ತನಿಖೆಯ ದಿಕ್ಕು ತಪ್ಪಿಸಲು ಹೊರಟಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರಾಷ್ಟ್ರೀಯ ತನಿಖಾ ತಂಡಗಳ ಬಗ್ಗೆ ಹಗುರವಾಗಿ ಮಾತನಾಡುವುದು ಸರಿಯಲ್ಲ ಎಂದರು.