CONNECT WITH US  

ನಾಮದ ಚಿಲುಮೆ ಸಸ್ಯೋದ್ಯಾನಕ್ಕೆ ಶಾಸಕ ಗೌರಿಶಂಕರ್‌ ಭೇಟಿ 

ತುಮಕೂರು: ಗ್ರಾಮಾಂತರ ಕ್ಷೇತ್ರ ವ್ಯಾಪ್ತಿಯಲ್ಲಿರುವ ನಾಮದಚಿಲುಮೆಯ ಸಸ್ಯೋದ್ಯಾನ ಹಾಗೂ ಜಿಂಕೆವನಕ್ಕೆ ಶಾಸಕ ಡಿ.ಸಿ.ಗೌರಿಶಂಕರ್‌ ಪ್ರವಾಸೋದ್ಯಮ ಇಲಾಖೆ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿನೀಡಿ ಪರಿಶೀಲನೆ ನಡೆಸಿದರು. 

 ನಾಮದ ಚಿಲುಮೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವ ಬಗ್ಗೆ ಸಾರ್ವಜನಿಕರಿಂದ ಹೆಚ್ಚು ದೂರುಗಳು ಬಂದ ಹಿನ್ನೆಲೆಯಲ್ಲಿ ಪ್ರವಾಸಿ ತಾಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಇಲ್ಲಿಗೆ ಬರುವ ಪ್ರವಾಸಿಗರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು. 

ಶುದ್ಧ ನೀರಿನ ಘಟಕ ಸ್ಥಾಪಿಸಿ: ನಾಮದ ಚಿಲುಮೆಗೆ ಆಗಮಿಸುವ ಪ್ರವಾಸಿಗರಿಗೆ ಶುದ್ಧ ಕುಡಿಯುವ ನೀರನ್ನುಕಲ್ಪಿಸುವ ದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಘಟಕವನ್ನು ಶೀಘ್ರವೇ ನಾಮದ ಚಿಲುಮೆಯಲ್ಲಿ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸ್ಥಳದಲ್ಲೇ ತಾಕೀತು ಮಾಡಿದರಲ್ಲದೇ ಈ ಭಾಗಕ್ಕೆ ಬರುವ ಪ್ರವಾಸಿಗರು ಶೌಚಾಲಯವಿಲ್ಲದೆ ಪರೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರವಾಸಿಗರು ಶಾಸಕರ ಗಮನ ಸೆಳೆದಾಗ ತಕ್ಷಣವೇ ಅಧಿಕಾರಿಗಳೊಂದಿಗೆ ಚರ್ಚಿಸಿ ನಾಮದಚಿಲುಮೆಯಲ್ಲಿ ಶೌಚಾಲಯವನ್ನು ನಿರ್ಮಿಸುವಂತೆ ತುರ್ತುಸೂಚನೆ ನೀಡಿದರು.

ಜಿಂಕೆಗಳಿಗೆ ಆಹಾರ ನೀಡಿ: ಜಿಂಕೆ ವನಕ್ಕೆ ಭೇಟಿ ನೀಡಿದ ಶಾಸಕರು ಅಲ್ಲಿನ ಪರಿಸ್ಥಿತಿ ಅವಲೋಕಿಸಿ ಸೂಕ್ತ ಸಮಯದಲ್ಲಿ ಜಿಂಕೆಗಳಿಗೆ ಆಹಾರ ಮತ್ತು ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವಂತೆ ಅರಣ್ಯ ಅಧಿಕಾರಿಗಳಿಗೆ ತಿಳಿಸಿ ನಾಮದ ಚಿಲುಮೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಮತ್ತು ಶೌಚಾಲಯವನ್ನು ಶೀಘ್ರವೇ ನಿರ್ಮಿಸಿ ಸಾರ್ವಜನಿಕರು ಬಳಸಲು ಅನುಕೂಲಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದರು.

ಅಕ್ರಮ ಚಟುವಟಿಕೆಗೆ ಕಡಿವಾಣ ಹಾಕಿ: ಇಲ್ಲಿರುವ ಉದ್ಯಾನವನವು ಅಕ್ರಮ ಚಟುವಟಿಕೆಗಳ ತಾಣವಾಗಿದ್ದು ಪೋಲೀಸ್‌ ಇಲಾಖೆಯ ಅಧಿಕಾರಿಗಳು ಅಕ್ರಮ ಚಟುವಟಿಕೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಇಲ್ಲಿರುವ ಉದ್ಯಾನವನಕ್ಕೆ ವಾರಂತ್ಯದ ರಜಾ ದಿನಗಳಲ್ಲಿ ಇಲ್ಲಿಗೆ ಆಗಮಿಸುವವರ ಸಂಖ್ಯೆ ಹೆಚ್ಚಳವಾಗುತ್ತಿದ್ದು ಇದನ್ನು ಸುಂದರ ಪ್ರವಾಸಿತಾಣವಾಗಿಸುವ ನಿಟ್ಟಿನಲ್ಲಿ ಹೆಚ್ಚಿನ ಅಭಿವೃದ್ಧಿ ಪಡಿಸುವ ಯೋಜನೆ ರೂಪಿಸುವಂತೆ ತಿಳಿಸಿದರು.

ಈ ವೇಳೆ ಜೆಡಿಎಸ್‌ ಹಿರಿಯಉಪಾಧ್ಯಕ್ಷ ಹಾಲನೂರು ಅನಂತ್‌ಕುಮಾರ್‌, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಹಿರೇಹಳ್ಳಿ ಮಹೇಶ್‌, ಜೆಡಿಎಸ್‌ ಮುಖಂಡರಾದ ಹರಳೂರು ರುದ್ರೇಶ್‌, ಭೈರೇಗೌಡ, ಹಾಗೂ ಪ್ರವಾಸೋದ್ಯಮ ಹಾಗೂ ಅರಣ್ಯಇಲಾಖೆಯ ಅಧಿಕಾರಿಗಳು ಹಾಜರಿದ್ದರು. 

Trending videos

Back to Top