ಗೋವಾ: ಬಿಜೆಪಿ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ: ಸದಾನಂದ ತಾನಾವಡೆ
Team Udayavani, Oct 17, 2021, 4:05 PM IST
ಪಣಜಿ: ರಾಜ್ಯದಲ್ಲಿ ವಿವಿಧ ರಾಜಕೀಯ ಪಕ್ಷಗಳು ರಾಜಕೀಯ ನಾಯಕರು ಮತ್ತು ಕಾರ್ಯಕರ್ತರಿಗೆ ವಿವಿಧ ಆಮಿಷವೊಡ್ಡಿ ತಮ್ಮ ಪಕ್ಷಕ್ಕೆ ಕರೆದುಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಆರೋಪಿಸಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ರಾಜ್ಯ ಬಿಜೆಪಿ ಸರ್ಕಾರ ಸಿದ್ಧವಿದೆ ಎಂದು ತಾನಾವಡೆ ನುಡಿದರು.
ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರ ಗೋವಾ ಕಾರ್ಯಕರ್ತರ ಸಮ್ಮೇಳನದಲ್ಲಿ ಅಪೇಕ್ಷೆಗಿಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಸದ್ಯ ಚುನಾವಣೆಯ ಗಾಳಿ ಬೀಸುತ್ತಿದೆ. ವಿವಿಧ ರಾಜಕೀಯ ಪಕ್ಷಗಳು ರಾಜಕೀಯ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಆಮಿಷವೊಡ್ಡಲಾಗುತ್ತಿದೆ. ಇದಕ್ಕಾಗಿ ಕೆಲ ಏಜನ್ಸಿಗಳ ಸಹಾಯ ಪಡೆಯಲಾಗುತ್ತಿದೆ ಎಂದರು.
ನಮ್ಮ ಪಕ್ಷವು ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧವಿದೆ, ಈ ಕುರಿತು ಮಾತುಕತೆಗೆ ನಾವು ಸಿದ್ಧರಿದ್ದೇವೆ. ಎಂಜಿಪಿ ಮತ್ತು ಗೋವಾ ಫೊರ್ವರ್ಡ್ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ನಾವು ಸಿದ್ಧತೆ ನಡೆಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ನುಡಿದರು.