ಸರ್ಕಾರ ರಚನೆ ವಿಫಲ; ಇಂದಿನಿಂದ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಅಂಕಿತ

Team Udayavani, Nov 12, 2019, 5:49 PM IST

ನವದೆಹಲಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವಲ್ಲಿ ಬಿಜೆಪಿ, ಶಿವಸೇನೆ, ಎನ್ ಸಿಪಿ ಹಾಗೂ ಕಾಂಗ್ರೆಸ್ ವಿಫಲವಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಮಂಗಳವಾರ ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಿದ ನಂತರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಆಡಳಿತ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಚುನಾವಣಾ ಫಲಿತಾಂಶ ಪ್ರಕಟಗೊಂಡು ಮೂರು ವಾರಗಳ ನಂತರವೂ ಸರ್ಕಾರ ರಚಿಸುವಲ್ಲಿ ಬಿಜೆಪಿ-ಶಿವಸೇನಾ ಮೈತ್ರಿಕೂಟ ಹಾಗೂ ಎನ್ ಸಿಪಿ, ಕಾಂಗ್ರೆಸ್ ಮೈತ್ರಿಕೂಟ ವಿಫಲವಾದ ನಂತರ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗುವಂತಾಗಿದೆ.

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರ ಶಿಫಾರಸ್ಸಿನ ಮೇಲೆ ರಾಷ್ಟ್ರಪತಿ ಆಡಳಿತ ಹೇರಲು ನಿರ್ಧರಿಸಲಾಗಿದೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಕುರಿತು ಬಿಜೆಪಿ ಶಿವಸೇನಾ ನಡುವೆ ಸಿಎಂ ಹುದ್ದೆಯ ವಿಚಾರದಲ್ಲಿ ಬಿಕ್ಕಟ್ಟು ತೀವ್ರಗೊಂಡ ನಂತರ ಸರ್ಕಾರ ರಚನೆಯಿಂದ ಬಿಜೆಪಿ ಹಿಂದೆ ಸರಿದ ನಂತರ ರಾಜ್ಯಪಾಲರು ಶಿವಸೇನೆಗೆ ಸರ್ಕಾರ ರಚಿಸಲು ಆಹ್ವಾನ ನೀಡಿದ್ದರು.

ಆದರೆ ಶಿವಸೇನೆಗೆ ಎನ್ ಸಿಪಿ ಬೆಂಬಲದ ನಿರ್ಧಾರದ ವಿಳಂಬವಾಗಿದ್ದರಿಂದ ಸೋಮವಾರ ರಾಜ್ಯಪಾಲ ಕೋಶಿಯಾರಿ ಅವರು ಮೂರನೇ ದೊಡ್ಡ ಪಕ್ಷವಾದ ಎನ್ ಸಿಪಿಗೆ ಸರ್ಕಾರ ರಚಿಸುವಂತೆ ಆಹ್ವಾನ ನೀಡಿದ್ದರು. ಆದರೆ ಎನ್ ಸಿಪಿ ಮತ್ತು ಕಾಂಗ್ರೆಸ್ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ರಾಜ್ಯಪಾಲರು ರಾಷ್ಟ್ರಪತಿ ಆಡಳಿತ ಹೇರುವಂತೆ ಕೇಂದ್ರಕ್ಕೆ ಶಿಫಾರಸು ಕಳುಹಿಸಿದ್ದರು.


ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ