ಡಿಕೆಶಿ ಡಿಸ್ಚಾರ್ಜ್: ವಿಶ್ರಾಂತಿಗೆ ಸೂಚನೆ
Team Udayavani, Nov 4, 2019, 3:04 AM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆಯಾದ ಬಳಿಕ ಶುಕ್ರವಾರ ಬೆನ್ನು ನೋವು ಹಾಗೂ ಲೋ ಬಿಪಿ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಭಾನುವಾರ ಬಿಡುಗಡೆಯಾಗಿದ್ದಾರೆ. ಎರಡು ದಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿರುವ ವೈದ್ಯರು ಎರಡು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆಂದು ತಿಳಿದು ಬಂದಿದೆ.
ಸೋಮವಾರ ಇಡಿ ಕೋರ್ಟ್ ಮುಂದೆ ಅವರ ತಾಯಿಯ ಅರ್ಜಿ ವಿಚಾರಣೆ ಬರುವ ಸಾಧ್ಯತೆ ಇದೆ ಎನ್ನುವ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ಹೇಳಲಾಗುತ್ತಿದೆ. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದರು.
ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿ, ಎಲ್ಲರ ಆಶೀರ್ವಾದದಿಂದ ಚೆನ್ನಾಗಿದ್ದೇನೆ. ವೈದ್ಯರು ಎರಡು ವಾರ ವಿಶ್ರಾಂತಿ ತೆಗೆದುಕೊಳ್ಳಲು ಸಲಹೆ ನೀಡಿದ್ದಾರೆ. ನನಗೆ ವಿಶ್ರಾಂತಿ ಬೇಕಿದೆ. ಸದ್ಯ ಯಾವುದೇ ವಿಷಯ ಮಾತನಾಡುವುದಿಲ್ಲ ಎಂದು ಹೇಳಿದರು. ನ.7 ರಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡಿ ದರ್ಶನ ಪಡೆಯಲಿದ್ದು, ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.