ಭುಗಿಲೆದ್ದ ಅಸಮಾಧಾನ;ಜೆಡಿಎಸ್ ಶಾಸಕ ಸ್ಥಾನಕ್ಕೆ ಮುನಿಶಾಮಪ್ಪ ರಾಜೀನಾಮೆ
Team Udayavani, Feb 23, 2017, 1:12 PM IST
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಅಸಮಾಧಾನಗೊಂಡಿರುವ ದೇವನಹಳ್ಳಿ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ನಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡಂತಾಗಿದೆ.
ಸ್ಪೀಕರ್ ಕೆಬಿ ಕೋಳಿವಾಡ ಅವರಿಗೆ ರಾಜೀನಾಮೆ ಪತ್ರ ರವಾನಿಸಿರುವ ಮುನಿಶಾಮಪ್ಪ ಅವರು ಯಾವ ಕಾರಣಕ್ಕೂ ರಾಜೀನಾಮೆ ಪತ್ರ ಮರು ಪರಿಶೀಲಿಸಲ್ಲ, ಹಾಗಾಗಿ ಕೂಡಲೇ ರಾಜೀನಾಮೆ ಸ್ವೀಕರಿಸುವಂತೆ ಒತ್ತಾಯಿಸಿದ್ದಾರೆ.
2018ರ ಚುನಾವಣೆಯಲ್ಲಿ ನಾರಾಯಣಸ್ವಾಮಿ ಎಂಬವರಿಗೆ ಟಿಕೆಟ್ ನೀಡಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡಿರುವ ಮುನಿಶಾಮಪ್ಪ ಅವರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ರಾಜೀನಾಮೆ ವಾಪಸ್ ಪಡೆಯುವಂತೆ ಎಚ್ ಡಿಕೆ ಮನವೊಲಿಕೆ:
ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯುವಂತೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪಿಳ್ಳ ಮುನಿಶಾಮಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಮನವೊಲಿಸುವ ಕಾರ್ಯ ನಡೆಸುತ್ತಿದ್ದಾರೆಂದು ಮಾಧ್ಯಮದ ವರದಿ ವಿವರಿಸಿದೆ.