ಯಾರ ವಿರುದ್ಧವೂ ಬಂಡಾಯವಿಲ್ಲ
Team Udayavani, Aug 22, 2019, 3:03 AM IST
ಬೆಂಗಳೂರು: ಸಂಪುಟದಲ್ಲಿ ಸಚಿವ ಸ್ಥಾನ ಸಿಗದಿದ್ದರಿಂದ ಬೇಸರಗೊಂಡಿದ್ದ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರು, ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವುದಾಗಿ ಮಾಧ್ಯಮಗಳಿಗೆ ಹೇಳಿಕೆ ನೀಡಿ, ಕೆಲವೇ ಗಂಟೆಗಳಲ್ಲಿ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡಿದ್ದಾರೆ.
ಯಾರ ವಿರುದ್ಧವೂ ಬಂಡಾಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬುಧವಾರ ಬೆಳಗ್ಗೆ ಸಂಪುಟ ವಿಸ್ತರಣೆಯ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತ ಗೆದ್ದವರನ್ನು ಬಿಟ್ಟು ಸೋತವರನ್ನು ಸಚಿವರನ್ನಾಗಿ ಮಾಡಿದ್ದಾರೆ ಎಂದು ಲಕ್ಷ್ಮಣ ಸವದಿ ವಿರುದ್ಧ ಅಸಮಾಧಾನ ಹೊರ ಹಾಕಿದ್ದರು.
ಅದೇ ಸಂದರ್ಭದಲ್ಲಿ ತಾವು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವ ಹೇಳಿಕೆ ನೀಡಿದ್ದರು. ಬಳಿಕ, ಸ್ಪಷ್ಟನೆ ನೀಡಿ, “ಯಡಿಯೂರಪ್ಪ ಅವರೇ ನನಗೆ ರಾಜಕೀಯಕ್ಕೆ ಬರಲು ಸ್ಪೂರ್ತಿಯಾಗಿದ್ದಾರೆ. ನಾನು ಯಾವುದೇ ಕಾರಣಕ್ಕೂ ಅವರ ವಿರುದ್ಧ ಹಾಗೂ ಪಕ್ಷದ ವಿರುದ್ಧ ಬಂಡಾಯ ಸಾರುವುದಿಲ್ಲ’ ಎಂದು ಹೇಳಿದರು.