ಇಂದು ಪಂಚರತ್ನ ರಥಯಾತ್ರೆ ಸಮಾರೋಪ; ಜೆಡಿಎಸ್ ಶಕ್ತಿ ಪ್ರದರ್ಶನಕ್ಕೆ ವೇದಿಕೆ ಸಜ್ಜು
ಇಂದು ಮಾಜಿ ಪ್ರಧಾನಿ ದೇವೇಗೌಡರ ರೋಡ್ಶೇ
Team Udayavani, Mar 26, 2023, 6:50 AM IST
ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಹಮ್ಮಿಕೊಂಡಿದ್ದ ಪಂಚರತ್ನ ರಥಯಾತ್ರೆ ಮೈಸೂರಿನಲ್ಲಿ ಭಾನುವಾರ ಸಮಾರೋಪಗೊಳ್ಳಲಿದೆ.
ಮೈಸೂರಿನ ಉತ್ತನಹಳ್ಳಿ ರಿಂಗ್ ರಸ್ತೆಯ ನೂರು ಎಕರೆ ಪ್ರದೇಶದ ವಿಶಾಲ ಮೈದಾನದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ. ಇದೊಂದು ರೀತಿಯಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನವೂ ಹೌದು.
ಸಮಾರಂಭಕ್ಕೂ ಮೊದಲು ಮೈಸೂರಿನ ಮಣಿ ಪಾಲ್ ಆಸ್ಪತ್ರೆ ಬಳಿಯ ರಿಂಗ್ ರಸ್ತೆಯಿಂದ ಬೃಹತ್ ರೋಡ್ ಶೋ ನಡೆಯಲಿದೆ. ಈ ರೋಡ್ ಶೋನಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾಗಿಯಾಗಲಿದ್ದಾರೆ.
ಸಮಾವೇಶದಲ್ಲಿ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಸಮಾವೇಶಕ್ಕೆ ಆಗಮಿಸುವ ಪ್ರತಿಯೊಬ್ಬರಿಗೂ ವಿಶಾಲ ಮೈದಾನದಲ್ಲಿ ಕೂರಲು ಆಸನದ ವ್ಯವಸ್ಥೆ, ಊಟ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಕಳೆದ ವರ್ಷ ನವೆಂಬರ್ 18ರಿಂದ ಮಾರ್ಚ್ 24ರವರೆಗೆ ಪಂಚರತ್ನ ರಥಯಾತ್ರೆ ರಾಜ್ಯಾದ್ಯಂತ ಸಂಚರಿಸಿತ್ತು.