ಗ್ರಾಪಂ ಚುನಾವಣೆ ಮುಂದೂಡಿಕೆ: ನೋಟಿಸ್
Team Udayavani, Jun 18, 2020, 7:54 AM IST
ಬೆಂಗಳೂರು: ರಾಜ್ಯದಲ್ಲಿ ಗ್ರಾಪಂ ಚುನಾವಣೆಗಳನ್ನು ಮುಂದೂಡಿರು ವುದನ್ನು ಆಕ್ಷೇಪಿಸಿ ಸಲ್ಲಿಸಿದ ಅರ್ಜಿ ಸಂಬಂಧ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಚುನಾವಣೆಗಳನ್ನು ಮುಂದೂಡಿ ರಾಜ್ಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಕೊಂಡಯ್ಯ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾ.ನಟರಾಜ್ ರಂಗಸ್ವಾಮಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು.
ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ, ಜು.1ರೊಳಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ವಿಚಾರಣೆ ಮುಂದೂಡಿತು. ರಾಜ್ಯ ಸರ್ಕಾರ, ರಾಜ್ಯ ಚುನಾವಣಾ ಆಯೋಗ ಹಾಗೂ ಎಲ್ಲಾ 30 ಜಿಲ್ಲಾಧಿಕಾರಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ. ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಪ್ರೊ. ರವಿವರ್ಮ ಕುಮಾರ್ ವಾದ ಮಂಡಿಸಿದರು. 2020ರ ಮೇ 30ರಂದು ಅವಧಿ ಕೊನೆಗೊಂಡ ರಾಜ್ಯದ 6,015 ಗ್ರಾಪಂಗಳ ಚುನಾವಣೆ ಮುಂದೂಡಿ ಮೇ 28ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕು.
ಪಂಚಾಯ್ತಿಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡುವ ಪ್ರಕ್ರಿಯೆಗೆ ತಡೆ ನೀಡಬೇಕು. ಅವಧಿ ಪೂರ್ಣಗೊಂಡ ಪಂಚಾಯ್ತಿಗಳಿಗೆ ಚುನಾವಣೆ ನಡೆಸುವ ಸಂವಿಧಾನ ಬದಟಛಿ ಹೊಣೆಗಾರಿಕೆ ನಿರ್ವಹಿಸುವಂತೆ ಮತ್ತು ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿಯಲ್ಲಿ ಕೋರಲಾ ಗಿದೆ. ಮೀಸಲಾತಿ ಪ್ರಕ್ರಿಯೆ ಪೂರ್ಣಗೊಳಿಸಿ ಪಟ್ಟಿಯನ್ನು ಚುನಾವಣಾ ಅಯೋಗಕ್ಕೆ ಸಲ್ಲಿಸಬೇಕು. ಸಕಾಲದಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.