ವೃತ್ತಿಪರ ಕೋರ್ಸ್: ಪ್ರವೇಶ ದಿನಾಂಕ ವಿಸ್ತರಣೆ
Team Udayavani, Aug 14, 2019, 3:00 AM IST
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಸಿಇಟಿ-2019ರ ಎರಡನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದಿರುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಿ ಕಾಲೇಜಿಗೆ ದಾಖಲಾಗಲು ನೀಡಿರುವ ಅಂತಿಮ ದಿನಾಂಕವನ್ನು ವಿಸ್ತರಿಸಲಾಗಿದೆ. ಪ್ರವಾಹ ಹಿನ್ನೆಲೆಯಲ್ಲಿ ಉಂಟಾಗಿದ್ದ ಪ್ರಕೃತಿ ವಿಕೋಪದಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯಕ್ಕೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ಆ.14ರವರೆಗೂ ಅವಧಿ ವಿಸ್ತರಿಸಲಾಗಿದೆ.
ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಬಿ.ಫಾರ್ಮಾ ಮೊದಲಾದ ಕೋರ್ಸ್‌ಗಳಿಗೆ 2ನೇ ಮುಂದುವರಿದ ಸುತ್ತಿನಲ್ಲಿ ಸೀಟು ಪಡೆದ ವಿದ್ಯಾರ್ಥಿಗಳು ಆ.14ರ ಸಂಜೆ 5.30ರೊಳಗೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.